Tuesday, June 23, 2026
spot_imgspot_img
spot_imgspot_img

ಮಂಗಳೂರು: ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕೊರೊನ ಪಾಸಿಟಿವ್ ಪ್ರಕರಣ; ಕರಾವಳಿಯ 29 ಕಾಲೇಜುಗಳಿಗೆ ಜಿಲ್ಲಾಡಳಿತದಿಂದ ನೋಟಿಸ್ ಜಾರಿ..!

- Advertisement -
- Advertisement -

ಮಂಗಳೂರು: ಕೋವಿಡ್ ಸೋಂಕು ದಿನೇದಿನೇ ತನ್ನ ಆರ್ಭಟವನ್ನು ಮುಂದುವರಿಸಿದೆ. ಏತನ್ಮಧ್ಯೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ಬರೋಬ್ಬರಿ 630 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಜಿಲ್ಲಾಡಳಿತ ಸುಮಾರು 29 ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿದೆ.

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನ ಪಾಸಿಟಿವಿಟಿ ದರ ಕಡಿಮೆ ಇರುವುದರಿಂದ ಶಾಲೆಗಳ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಆದರೆ ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಕಡಿಮೆಯಾಗದೆ ಇರುವುದರಿಂದ ಮುಂದಿನ ಎರಡು ವಾರಗಳ ಕಾಲ ಶಾಲೆಗಳ ಆರಂಭ ಪ್ರಕ್ರಿಯೆಯನ್ನು ಮುಂದೂಡಿ ಜಿಲ್ಲಾಡಳಿತ ನಿರ್ಧಾರ ಕೈಗೊಂಡಿತ್ತು. ಈ ನಡುವೆ ಕಾಲೇಜು ವಿದ್ಯಾರ್ಥಿಗಳಲ್ಲಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಶಾಲಾರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇರುವುದನ್ನು ತಳ್ಳಿ ಹಾಕುವಂತಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳು ಆರಂಭಗೊಂಡ ನಂತರ ಆರೋಗ್ಯ ಇಲಾಖೆಯಿಂದ ವಿದ್ಯಾರ್ಥಿಗಳ ಕೊರೋನ ಪರೀಕ್ಷೆಯನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಸುಮಾರು 29 ಕಾಲೇಜುಗಳ 630ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಪೈಕಿ 326ರಷ್ಟು ವಿದ್ಯಾರ್ಥಿಗಳು ಕೇರಳದವರಾಗಿದ್ದರೆ, ಇನ್ನುಳುದ ವಿದ್ಯಾರ್ಥಿಗಳು ಮಹಾರಾಷ್ಟ್ರ, ಉತ್ತರ ಭಾರತ ಹಾಗೂ ದಕ್ಷಿಣ ಕನ್ನಡ ಮೂಲದವರು. ಸೋಂಕು ಪತ್ತೆಯಾಗುತ್ತಿದ್ದಂತೆ 29 ಕಾಲೇಜುಗಳನ್ನು ಕಂಟೈನ್‌ಮೆಂಟ್ ರೆನ್ ಆಗಿ ಪರಿವರ್ತಿಸಲಾಗಿದೆ.

ಕೋವಿಡ್ ಸೋಂಕಿತರ ಪೈಕಿ ನರ್ಸಿಂಗ್, ವೈದ್ಯಕೀಯ, ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಅಧಿಕವಾಗಿದ್ದಾರೆ. ಇಲ್ಲಿನ ನರ್ಸಿಂಗ್, ವೈದ್ಯಕೀಯ ಕಾಲೇಜುಗಳಲ್ಲಿ ಕೇರಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಇತರ ವಿದ್ಯಾರ್ಥಿಗಳಿಗೂ ಸೋಂಕು ಹರಡಿರುವ ಸಾಧ್ಯತೆ ಕಂಡುಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಆಯಾ ಕಾಲೇಜುಗಳ ಹಾಸ್ಟೆಲ್‌ಗಳು, ಫ್ಲಾಟ್‌ಗಳು, ಕೊರೋನ ಆರೈಕೆ ಕೇಂದ್ರಗಳಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೊರರಾಜ್ಯಗಳಿಂದ ಆಗಮಿಸುವ ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೆಟ್ ತರುವುದನ್ನು ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ. ಹಾಗೆ ವರದಿ ತಂದು ಏಳು ದಿನಗಳ ಕ್ವಾರಂಟೈನ್ ಅವಧಿ ಪೂರೈಸಿದ ನಂತರವೂ ಹಲವು ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗುಲಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಪರೀಕ್ಷೆಗಳು ಮತ್ತು ಭೌತಿಕ ತರಗತಿ ಸಂದರ್ಭದಲ್ಲಿ ದೈಹಿಕ ಅಂತರ ಇತ್ಯಾದಿ ಕೊರೋನ ಮಾರ್ಗಸೂಚಿಗಳನ್ನು ಪಾಲನೆ ಮಾಡದ ಕಾಲೇಜುಗಳಿಗೆ ಜಿಲ್ಲಾಡಳಿತ ನೋಟಿಸ್ ಜಾರಿಗೊಳಿಸುತ್ತಿದೆ ಎಂದು ಅಧಿಕಾರಿಗಳು ಸುದ್ದಿಗಾರರಿಗೆ ಮಾಹಿತಿ ಒದಗಿಸಿದ್ದಾರೆ.

- Advertisement -

Related news

error: Content is protected !!