ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡಲು ರಾಜ್ಯ ಸರ್ಕಾರ ಮಹತ್ವದ ಅಧಿಸೂಚನೆ ಹೊರಡಿಸಿದೆ. ನೇರ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳುವ ಎಲ್ಲಾ ರೀತಿಯ ಅಂದರೆ ಗ್ರೂಪ್ ‘ಎ’ ನಿಂದ ಗ್ರೂಪ್ ‘ಡಿ’ ವರೆಗಿನ ಹುದ್ದೆಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ನೀಡಬೇಕೆಂದು ಆದೇಶ ಮಾಡಿದೆ.

ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಟಿ.ಬಿ. ಜಯಚಂದ್ರ ಅವರು ಮೀಸಲಾತಿ ಕೊಡುವ ನಿಟ್ಟಿನಲ್ಲಿ ಚಿಂತನೆ ಆರಂಭಿಸಿದ್ದರು. ಇದೀಗ ಹೈಕೋರ್ಟ್ ಆದೇಶದಂತೆ ರಾಜ್ಯ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ನ್ನು ತಿದ್ದುಪಡಿ ಮಾಡಲಾಗಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ನ ನಿರ್ದೇಶನಗಳನ್ನು ಜಾರಿಗೊಳಿಸುವಂತೆ ನ್ಯಾಯಾಲಯವು ಕಳೆದ ವರ್ಷ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಜುಲೈ 6, 2021 ರಂದು ಅಧಿಸೂಚನೆ ಹೊರಡಿಸಿರುವ ಸರ್ಕಾರ ಲೈಂಗಿಕ ಅಲ್ಪಸಂಖ್ಯಾತರಿಗೆ ಈಸಲಾತಿ ನಿಗದಿ ಮಾಡಿ ಆದೇಶ ಮಾಡಿದೆ. ಅಧಿಸೂಚನೆಯ ಪ್ರಕಾರ ಜನರಲ್ ಮೆರಿಟ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ವಿಭಾಗಗಳಲ್ಲಿಯೂ ಲೈಂಗಿಕ ಅಲ್ಪಸಂಖ್ಯಾತರಿಗೆ ಶೇಕಡಾ 1 ರಷ್ಟು ಮೀಸಲಾತಿ ಲಭ್ಯವಿರುತ್ತದೆ. ಲೈಂಗಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಲು 1977 ರ ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳ ನಿಯಮ 9ಕ್ಕೆ ತಿದ್ದುಪಡಿ ತರಲಾಗಿದೆ.

ಲೈಂಗಿಕ ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತಿರುವ ಸಂಗಮ ಎಂಬ ಸಂಸ್ಥೆಯು ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅಧಿಸೂಚನೆಯ ಕರಡನ್ನು ಸಲ್ಲಿಸಿತ್ತು. ಶೇಕಡಾ 1 ರ ಪ್ರಮಾಣದಲ್ಲಿ ಸಾಕಷ್ಟು ಸಂಖ್ಯೆಯ ಅರ್ಹ ಲೈಂಗಿಕ ಅಲ್ಪಸಂಖ್ಯಾತ ಜನರು ಲಭ್ಯವಿಲ್ಲದಿದ್ದರೆ, ಖಾಲಿ ಹುದ್ದೆಗಳನ್ನು ಅದೇ ವರ್ಗದ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಭರ್ತಿ ಮಾಡಬೇಕು ಎಂದು ನಿಯಮಗಳು ಸೂಚಿಸುತ್ತವೆ.

ಲೈಂಗಿಕ ಅಲ್ಪಸಂಖ್ಯಾತರನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಆಗಿನ ಕಾಂಗ್ರೆಸ್ ಸರ್ಕಾರ 2017ರ ನವೆಂಬರ್ ತಿಂಗಳಿನಲ್ಲಿ ‘ಲೈಂಗಿಕ ಅಲ್ಪಸಂಖ್ಯಾತರ ನೀತಿ’ಯನ್ನು ಜಾರಿಗೆ ತಂದಿತ್ತು. ಆಗಿನ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕೊಡುವ ಬಗ್ಗೆಯೂ ಚರ್ಚೆ ಆಗಿತ್ತು. ಲೈಂಗಿಕ ಅಲ್ಪಸಂಖ್ಯಾತರಿಗೆ ಸಂವಿಧಾನದಲ್ಲಿನ ಎಲ್ಲ ಸವಲತ್ತುಗಳು ಸಿಗಬೇಕು ಎಂದು 2014ರಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಅದರಂತೆ ರಾಜ್ಯ ಸರ್ಕಾರ ಹಂತಹಂತವಾಗಿ ಮೀಸಲಾತಿ ಕೊಡುವ ಕುರಿತು ಪ್ರಕ್ರಿಯೆ ಮುಂದುವರೆಸಿತ್ತು.

ನಲ್ಸಾ (ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ) – ವರ್ಸಸ್ ಯೂನಿಯನ್ ಆಫ್ ಇಂಡಿಯಾ 2014 ರಲ್ಲಿ ಸುಪ್ರೀಂಕೋರ್ಟ್ ಆದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಲೈಂಗೀಕ ಅಲ್ಪಸಂಖ್ಯಾತರನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗದ ನಾಗರಿಕರಂತೆ ಪರಿಗಣಿಸಲು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಮತ್ತು ಸಾರ್ವಜನಿಕ ನೇಮಕಾತಿಗಳಲ್ಲಿ ಎಲ್ಲಾ ರೀತಿಯ ಮೀಸಲಾತಿಯನ್ನು ವಿಸ್ತರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತ್ತು. ಬಿಹಾರ ಸೇರಿದಂತೆ ಹಲವು ರಾಜ್ಯ ಗಳು ಮೀಸಲಾತಿ ನೀಡಿವೆ.










