

ನವದೆಹಲಿ: ಶ್ರೀರಾಮನವಮಿ ಮೆರವಣಿಗೆ ವೇಳೆ ನಾಲ್ಕು ರಾಜ್ಯಗಳಲ್ಲಿ ಹಿಂಸಾಚಾರ ವರದಿ ಬೆನ್ನಲ್ಲೇ ಹನುಮ ಜಯಂತಿ ವೇಳೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಲ್ಲು ತೂರಾಟ ನಡೆದಿದೆ. ದೆಹಲಿಯ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ ಮೇಲೆ ಎರಡು ಸಮುದಾಯಗಳ ನಡುವೆ ಕಲ್ಲು ತೂರಾಟ ನಡೆದಿರುವ ವರದಿಯಾಗಿದೆ. ಈ ವೇಳೆ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ದೊಡ್ಡ ದೊಡ್ಡ ಗುಂಪುಗಳು ಪರಸ್ಪರ ಕಲ್ಲು ತೂರಾಟದಲ್ಲಿ ತೊಡಗಿ ಪರಿಸ್ಥಿತಿ ವಿಕೋಪಕ್ಕೆ ಹೋಗ್ತಿದ್ದಂತೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ಜಹಾಂಗೀರ್‌ಪುರಿ ಮಾತ್ರವಲ್ಲದೆ ಇತರ ಅಕ್ಕಪಕ್ಕದ ಮತ್ತು ಸೂಕ್ಷ್ಮ ಪ್ರದೇಶಗಳಲ್ಲೂ ಘರ್ಷಣೆಗಳು ನಡೆದಿವೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ಹೇಳಿದ್ದಾರೆ.
ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ತೊಂದರೆಗೀಡಾದ ಪ್ರದೇಶಗಳಿಗೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ. ಗಲಭೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ, ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಮತ್ತು ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ಜನರಿಗೆ ಮನವಿ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಹಿಂಸಾಚಾರದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮತ್ತು ವಿಷಯವನ್ನು ಸೂಕ್ಷ್ಮವಾಗಿ ನಿಭಾಯಿಸುವಂತೆ ಸೂಚಿಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಲ್ಲು ತೂರಾಟವನ್ನು ಖಂಡಿಸಿದ್ದಾರೆ ಮತ್ತು ಸಂಬಂಧಪಟ್ಟವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಪರಸ್ಪರರ ಕೈ ಹಿಡಿದು ಶಾಂತಿ ಕಾಪಾಡುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.










