Tuesday, April 30, 2024
spot_imgspot_img
spot_imgspot_img

ತೂಗು ಸೇತುವೆಯ ಮೇಲೆ ಕಾರು ಚಾಲನೆ; ಆಕ್ಷೇಪಿಸಿದ್ದಕ್ಕೆ ದರ್ಪದ ವರ್ತನೆ

- Advertisement -G L Acharya panikkar
- Advertisement -

ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರನ್ನು ಚಲಾಯಿಸಿಕೊಂಡು ಬಂದಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರವಾಸಿಗರು ದೂರಿದ್ದಾರೆ.

ಸೇತುವೆಯಲ್ಲಿ ಸಾಗಿ ಸುಮಾರು ಮುಂದೆ ಬಂದ ಕಾರನ್ನು ಸ್ಥಳೀಯರು ತಡೆದು, ಬಂದ ದಾರಿಗೆ ಹಿಂದಕ್ಕೇ (ರಿವರ್ಸ್ ಗೇರ್‌ನಲ್ಲಿ) ಕಳುಹಿಸಿದ್ದಾರೆ. ಗುಜರಾತ್‌ನ ಮೊರ್ಬಿಯಲ್ಲಿ ತೂಗುಸೇತುವೆ ಕುಸಿದು ನೂರಾರು ಜನ ಮೃತಪಟ್ಟ ಸಂಗತಿಯಿಂದಲೂ ಕೆಲವರು ಎಚ್ಚೆತ್ತುಕೊಂಡಿಲ್ಲ. ಕಾರು ಚಲಾಯಿಸಿ ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದಾರೆ.

ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲ್ಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗು ಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲಿನ ಪ್ರಾಕೃತಿಕ ಸೌಂದರ್ಯದ ಕಾರಣ ಪ್ರವಾಸಿ ತಾಣವಾಗಿಯೂ ಮಾರ್ಪಟ್ಟಿದೆ. ಹಲವು ಗ್ರಾಮಸ್ಥರಿಗೆ ಇದು ದೈನಂದಿನ ಜೀವನದ ಅಗತ್ಯ ಸೌಕರ್ಯವಾಗಿದೆ.

ಪ್ರವಾಸ ಬಂದ ಕೆಲವರು ಸೇತುವೆಯ ಮೇಲೆ ಇಕ್ಕಟ್ಟಾದ ಜಾಗದಲ್ಲಿ ಕಾರು ಚಲಾಯಿಸಿಕೊಂಡು ಬರುತ್ತಾರೆ. ಕಾರು ಬಂದಾಗ ಸೇತುವೆಯಲ್ಲಿ ನಡೆದುಕೊಂಡು ಹೋಗಲು ಕೂಡ ಜಾಗವಿರುವುದಿಲ್ಲ. ಇದೊಂದು ದುಃಸ್ಸಾಹಸ, ಕಾರನ್ನು ಅದರಲ್ಲಿ ತರಬೇಡಿ ಎಂದು ಗ್ರ‌ಾಮದ ಹಿರಿಯರು ಕಿವಿಮಾತು ಹೇಳಿದರೂ ಧಿಕ್ಕರಿಸುತ್ತಿದ್ದಾರೆ. ಅಂಥವರ ವಿರುದ್ಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸೇತುವೆಗೆ ಅಪಾಯವಾಗದಂತೆ ಕಾಪಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!