Wednesday, July 22, 2026
spot_imgspot_img
spot_imgspot_img

ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಅಪರಾಧಿಯನ್ನು ಬಂಧಿಸಿದ ಕಡಬ ಪೊಲೀಸರು

- Advertisement -
- Advertisement -


ಕಡಬ: 2012ರಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಬಳಿಕ ತಲೆಮರೆಸಿಕೊಂಡಿದ್ದ ಅಪರಾಧಿಯನ್ನು ಕಡಬ ಪೊಲೀಸರು ಆಂಧ್ರಪ್ರದೇಶದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬೆಳಕಿಗೆ ಬಂದಿದೆ.


ದಿನಾಂಕ 31.01.2012 ರಂದು ಕಡಬ ಠಾಣಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಕೊಂಬಾರು ಗ್ರಾಮದ ಅಮೈತಡ್ಕ ಪ್ರದೇಶದಲ್ಲಿ ಸಾರ್ವಜನಿಕ ರಸ್ತೆಯ ಸಮೀಪ ಮೋರಿಯ ಅಡಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ.15/2012 ಪ್ರಕರಣ ದಾಖಲಾಗಿ, ಐಪಿಸಿ ಕಲಂ 302, 201 r/w 34 ಅಡಿ ತನಿಖೆ ಕೈಗೊಳ್ಳಲಾಗಿತ್ತು.


ಆಗಿನ ತನಿಖಾಧಿಕಾರಿಯಾಗಿದ್ದ ಎಂ.ಎನ್. ಅನುಚೇತ್ ಐಪಿಎಸ್ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಸುಳ್ಯ ತಾಲೂಕಿನ ಅಜ್ಜವರ ನಿವಾಸಿ ಎನ್.ಎಂ. ಅಬ್ದುಲ್ ಅಜೀಜ್ (30) ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.


ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಶ್ರೀನಿವಾಸ್ ಹರೀಶ್ ಕುಮಾರ್ ಮತ್ತು ವಿಜಯ್ ಕುಮಾರ್ ಎ. ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.2 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕರಾದ ಕೆ.ಪಿ. ಯಶೋಧ ಅವರು ಪ್ರಕರಣದಲ್ಲಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷೆ ಪ್ರಕಟವಾದ ಬಳಿಕ ಆರೋಪಿಯು ತಲೆಮರೆಸಿಕೊಂಡಿದ್ದು, ದೀರ್ಘಕಾಲದಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಇದೀಗ ಕಡಬ ಪೊಲೀಸ್ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ಹಾಗೂ ಸಿಬ್ಬಂದಿ ತಂಡ ಆಂಧ್ರಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತನನ್ನು ದಿನಾಂಕ 25.04.2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

- Advertisement -

Related news

error: Content is protected !!