
ಪುತ್ತೂರು: ಪುತ್ತೂರಿನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕಾನ್ಸ್‌ಸ್ಟೇಬಲ್‌ವೊಬ್ಬರು ಮದ್ಯಪಾನ ಮಾಡಿದ್ದರು ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮದ್ಯಪಾನ ಮಾಡಿಲ್ಲ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಳಿಕ ಪ್ರಕರಣದ ದೂರುದಾರರು ಹಾಗೂ ಪ್ರತಿದೂರುದಾರರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ಬಳಿ ಪೊಲೀಸ್ ಸಿಬ್ಬಂದಿ ಕರ್ತವ್ಯದಲ್ಲಿದ್ದ ವೇಳೆ, ಅಲ್ಲಿ ಸೇರಿದ್ದ ಕೆಲವರು ಪೊಲೀಸ್ ಸಿಬ್ಬಂದಿ ಮದ್ಯಪಾನ ಮಾಡಿರುವುದಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯನ್ನು ಆಲ್ಕೋಮೀಟರ್ ಪರೀಕ್ಷೆಗೆ ಒಳಪಡಿಸಲಾಗಿತ್ತು.



ಇದೇ ವೇಳೆ, ಕರ್ತವ್ಯನಿರತ ಪೊಲೀಸರ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂ. 97/2026ರ ದೂರುದಾರರು, ತಮ್ಮ ದೂರಿನಲ್ಲಿ ಪ್ರಮುಖ ಆರೋಪಿಯಾಗಿರುವ ಅಂಜನಾ ಪೈ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಕ್ರೈಂ ನಂ. 98/2026ರ ದೂರುದಾರರು, ತಮ್ಮ ಮಗ ಸುದರ್ಶನ್ ಪೈ ಮೇಲೆ ಹಲ್ಲೆ ನಡೆಸಿದ ಆರೋಪಿಯಾಗಿರುವ ನೌಷಾದ್ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ.
ಈ ಎರಡೂ ಆಕ್ಷೇಪಣೆಗಳನ್ನು ತನಿಖಾಧಿಕಾರಿಗಳು ಪರಿಶೀಲಿಸಿ, ಕಾನೂನುಬದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಬಳಿ ಹೆಚ್ಚಿನ ಮಾಹಿತಿ ಅಥವಾ ದಾಖಲೆಗಳಿದ್ದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ನೇರವಾಗಿ ಸಲ್ಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.







