
ಮಂಗಳೂರು: ಕೊಲೆ ಆರೋಪ ಹೊರಿಸುವುದಾಗಿ ಬೆದರಿಸಿ ಹಣ ಮತ್ತು ಆಸ್ತಿಯನ್ನು ಸುಲಿಗೆ ಮಾಡಲು ಸಂಚು ರೂಪಿಸಲಾಗಿದೆ ಹಾಗೂ ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ತರಲಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.

ಮಾಯ ಅನ್ನಾಮೇರಿ ರೇಗೋ ಅವರು ನೀಡಿದ ದೂರಿನ ಆಧಾರದ ಮೇಲೆ 2026ರ ಆಗಸ್ಟ್ 10ರಂದು ಉರ್ವಾ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 83/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 61(1)(a) ಮತ್ತು 308(7)ರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅಕ್ಟೋಬರ್ 23ರಂದು ನವೀನ್ ಥೋರೆಸ್ (42) ಎಂಬಾತನನ್ನು ಬಂಧಿಸಿದ್ದಾರೆ.

ಬಂಧಿತನು ಮಂಗಳೂರಿನ ಶಕ್ತಿನಗರದ ಪದವು ಗಾನಮಜಲಿನ ನಿವಾಸಿಯಾಗಿದ್ದು, ಜೋಸೆಫ್ ಥೋರೆಸ್ ಅವರ ಪುತ್ರ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.ಬಂಧಿತನನ್ನು ಅಕ್ಟೋಬರ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ತನಿಖೆ ಮುಂದುವರಿದಿದ್ದು, ಇದರಲ್ಲಿ ಇತರರು ಭಾಗಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.








