
ಸುಬ್ರಹ್ಮಣ್ಯ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು, ಎರಡು ಜಾನುವಾರುಗಳನ್ನು ರಕ್ಷಿಸಿದ ಘಟನೆ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಸಮೀಪ ನಡೆದಿದೆ.
ಜೂನ್ 13ರಂದು ಬೆಳಗ್ಗೆ KA-13 D 1923 ನೋಂದಣಿ ಸಂಖ್ಯೆಯ ಪಿಕಪ್ ವಾಹನವು ಆಯತಪ್ಪಿ ಬಿದ್ದಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ವಾಹನದ ಚಾಲಕ ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚಂದ್ರು ಅಲಿಯಾಸ್ ಚಂದ್ರಶೇಖರ ಹಾಗೂ ಕ್ಲೀನರ್ ಮೋಹನ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು.
ವಿಚಾರಣೆಯಲ್ಲಿ ಆರೋಪಿಗಳು ಯಾವುದೇ ಪರವಾನಗಿ ಇಲ್ಲದೆ ಎರಡು ಜಾನುವಾರುಗಳನ್ನು ಮಾಂಸ ಮಾರಾಟದ ಉದ್ದೇಶದಿಂದ ಹಿಂಸಾತ್ಮಕವಾಗಿ ವಾಹನದಲ್ಲಿ ಸಾಗಿಸುತ್ತಿದ್ದು, ವಾಹನ ಅಪಘಾತಕ್ಕೀಡಾದ ವೇಳೆ ಜಾನುವಾರುಗಳನ್ನು ಇಳಿಸಿ ಓಡಿಸಿರುವುದು ಬೆಳಕಿಗೆ ಬಂದಿದೆ. ಬಳಿಕ ಘಟನಾ ಸ್ಥಳದ ಸಮೀಪವೇ ಎರಡು ಜಾನುವಾರುಗಳನ್ನು ಪತ್ತೆಹಚ್ಚಿ ರಕ್ಷಿಸಲಾಗಿದೆ.
ಪೊಲೀಸರು ಕೃತ್ಯಕ್ಕೆ ಬಳಸಿದ ಪಿಕಪ್ ವಾಹನ ಹಾಗೂ ಎರಡು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕರ್ನಾಟಕ ಗೋವುಗಳ ಸಂರಕ್ಷಣಾ ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ-2020, ಪ್ರಾಣಿ ಸಂರಕ್ಷಣಾ ಕಾಯ್ದೆ-1960 ಹಾಗೂ ಮೋಟಾರು ವಾಹನ ಕಾಯ್ದೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.







