Friday, October 16, 2026
spot_imgspot_img
spot_imgspot_img

ಈಶಾನ್ಯ ಮಾನ್ಸೂನ್ ಪ್ರಭಾವ: ಬೆಂಗಳೂರಿನಲ್ಲಿ ಧಾರಾಕಾರ ಮಳೆ -ಮುಂದಿನ ಒಂದು ವಾರ ರಾಜ್ಯದಲ್ಲಿ ಮಳೆ ಸಾಧ್ಯತೆ

- Advertisement -
- Advertisement -

ಬೆಂಗಳೂರು : ಈಶಾನ್ಯ ಮಾನ್ಸೂನ್ ಮಾರುತಗಳ ಪ್ರಭಾವದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಗುರುವಾರ ಸಂಜೆ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಏಕಾಏಕಿ ಸುರಿದ ಗುಡುಗು ಸಹಿತ ಜೋರು ಮಳೆಗೆ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿತ್ತು.

ಅಲ್ಲದೆ, ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.ನಗರದ ಮೆಜೆಸ್ಟಿಕ್‌, ಪುರಭವನ, ಕೆ.ಆ‌ರ್.ಮಾರ್ಕೆಟ್, ಜಯನಗರ, ಶೇಷಾದ್ರಿಪುರಂ, ವಿಧಾನಸೌಧ, ಮಲ್ಲೇಶ್ವರಂ, ರಾಜಾಜಿನಗರ, ಜಯನಗರ, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೊ ರೇಷನ್ ಸೇರಿದಂತೆ ಹಲವೆಡೆ ಮಳೆ ಅಬ್ಬರಿಸಿತು. ದಿಢೀ‌ರ್ ಸುರಿದ ಬಿರುಸಿನ ಮಳೆಗೆ ಬಸ್‌ ನಿಲ್ದಾಣಗಳಲ್ಲಿ ಜನರು ಆಶ್ರಯ ಪಡೆದರು.ಇನ್ನು, ಅ.19ರ ವರೆಗೆ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್‌. ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಪ್ರಭಾವ ಕಡಿಮೆಯಾಗಿದ್ದು, ಇದೀಗ ಈಶಾನ್ಯ ಮಾರುತಗಳು ದಕ್ಷಿಣ ಭಾರತದಲ್ಲಿ ಪ್ರಭಾವ ಬೀರಲು ಆರಂಭಿಸಿವೆ. ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಿತ್ತು.

ಕಲಬುರಗಿಯಲ್ಲಿ ಸುಮಾರು 36 ಡಿಗ್ರಿ ಸೆಲ್ಸಿಯಸ್, ಕಾರವಾರದಲ್ಲಿ 39 ಡಿಗ್ರಿ ಸೆಲ್ಸಿಯಸ್, ಹೊನ್ನಾವರದಲ್ಲಿ 37 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಮುಂಬರುವ ಮಳೆಯಿಂದಾಗಿ ತಾಪಮಾನದಲ್ಲಿ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ

- Advertisement -

Related news

error: Content is protected !!