Wednesday, November 11, 2026
spot_imgspot_img
spot_imgspot_img

ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದತಿ: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಜ್ಯ ಸರಕಾರ

- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿ ಹೆಚ್ಚಳವನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಸಲ್ಲಿಸಿದೆ.ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಹೆಚ್ಚಿಸಲಾಗಿತ್ತು.

ಇದರಿಂದ ಒಟ್ಟು ಮೀಸಲಾತಿ ಪ್ರಮಾಣ ಶೇ.56ಕ್ಕೆ ಏರಿಕೆಯಾಗಿತ್ತು. ಆದರೆ, ಈ ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಹೆಚ್ಚಳಕ್ಕೆ ಸಂಬಂಧಿಸಿದ ಕಾಯಿದೆಯ ಸೆಕ್ಷನ್ 3 ಮತ್ತು 4ನ್ನು ರದ್ದುಗೊಳಿಸಿ ತೀರ್ಪು ನೀಡಿತ್ತು.ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು 2026ರ ಅಕ್ಟೋಬರ್ 27ರಂದು ಸರಕಾರ ಅನುಮೋದನೆ ನೀಡಿತ್ತು.

ಅದರಂತೆ ಅಕ್ಟೋಬರ್ 28ರಂದು ಮೇಲ್ಮನವಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿತ್ತು.ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನದ ಒಂಬತ್ತನೇ ಅನುಸೂಚಿಯಲ್ಲಿ ರಕ್ಷಣೆ ನೀಡುವಂತೆ 2025ರ ಡಿಸೆಂಬರ್ 18ರಂದು ಕರ್ನಾಟಕ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು. ಅಲ್ಲದೆ, 2026ರ ಫೆಬ್ರವರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿತ್ತು. ನ್ಯಾಯಾಲಯದ ತೀರ್ಪು ಬರುವವರೆಗೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಹೆಚ್ಚುವರಿಯಾಗಿ ಶೇ.6ರಷ್ಟು ಹುದ್ದೆಗಳನ್ನು ಬ್ಯಾಕ್‌ಲಾಗ್‌ನಲ್ಲಿ ಕಾಯ್ದಿರಿಸಲಾಗಿದೆ ಎಂದು ಸರಕಾರ ತಿಳಿಸಿದೆಪರಿಶಿಷ್ಟ ಜಾತಿಗಳಲ್ಲಿನ ಅತ್ಯಂತ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿಯ ಪ್ರಯೋಜನ ತಲುಪಿಸುವ ಉದ್ದೇಶದಿಂದ ಒಳಮೀಸಲಾತಿಯನ್ನೂ ಜಾರಿಗೆ ತರಲಾಗಿದೆ. 2026ರ ಅಕ್ಟೋಬರ್ 15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿತ್ತು.

ಮೀಸಲಾತಿ ಹೆಚ್ಚಳಕ್ಕೆ ಕಾನೂನುಬದ್ಧ ರಕ್ಷಣೆ ಒದಗಿಸಲು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವಂತೆ ಕೇಂದ್ರ ಸರಕಾರದ ಮೇಲೂ ಒತ್ತಡ ಮುಂದುವರಿಸಲಾಗುವುದು.

ಎಸ್‌ಸಿ, ಎಸ್‌ಟಿ ಹಾಗೂ ಹಿಂದುಳಿದ ಸಮುದಾಯಗಳ ಹಕ್ಕುಗಳನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ನಲ್ಲಿನ ಕಾನೂನು ಹೋರಾಟದ ಜೊತೆಗೆ ಸಂವಿಧಾನ ತಿದ್ದುಪಡಿ ಪ್ರಯತ್ನವನ್ನೂ ಮುಂದುವರಿಸಲಾಗುವುದು ಎಂದು ರಾಜ್ಯ ಸರಕಾರ ತಿಳಿಸಿದೆ.

- Advertisement -

Related news

error: Content is protected !!