
ಬೆಂಗಳೂರು : ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಆರು ಮಂದಿ ಸಚಿವರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದೆ.
ಸಮಿತಿಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎನ್. ಮುನಿಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಸ್ ಸಚಿವ ಯು.ಟಿ. ಖಾದರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ ಹಾಗೂ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಮಿತಿಯ ಸಮಿತಿಯ ಸದಸ್ಯರಾಗಿದ್ದಾರೆ.ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ, ಸೂಕ್ತವಾದ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಸರ್ಕಾರಕ್ಕೆ ಶಿಫಾರಸು ಮಾಡುವುದು ಸಮಿತಿಯ ಪ್ರಮುಖ ಕಾರ್ಯವಾಗಿರಲಿದೆ.
ಪ್ರಕರಣಗಳ ಸ್ವರೂಪ, ಹಿನ್ನೆಲೆ ಹಾಗೂ ಸಂಬಂಧಿತ ಅಂಶಗಳನ್ನು ಪರಿಗಣಿಸಿ, ನಿಯಮಾನುಸಾರ ಅರ್ಹ ಪ್ರಕರಣಗಳ ಬಗ್ಗೆ ಸಮಿತಿ ತನ್ನ ಅಭಿಪ್ರಾಯವನ್ನು ಸಲ್ಲಿಸಲಿದೆ.








