


ಕಲಬುರಗಿ: 40 ವರ್ಷದ ಮಹಿಳೆಯೊಂದಿಗೆ ಸಲುಗೆ ಬೆಳೆಸಿಕೊಂಡು, ಬಳಿಕ ಆಕೆಯ ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಂಎಸ್‌ಕೆ ಮಿಲ್ ಪ್ರದೇಶದ ಗಲೀಬ್ ಕಾಲೋನಿ ನಿವಾಸಿ, ಪೊಲೀಸ್ ಕಾನ್‌ಸ್ಟೇಬಲ್ ಸೈಯದ್ ತೌಸಿಫ್ ಹುಸೇನ್ (41) ಆರೋಪಿಯಾಗಿದ್ದಾರೆ. 2023ರಲ್ಲಿ ಪೊಲೀಸ್ ಠಾಣೆಯೊಂದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯ ಮಾಡುವ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಎನ್ನಲಾಗಿದೆ. ತನ್ನನ್ನು ಪ್ರೀತಿಸುವಂತೆ ಪದೇಪದೇ ಒತ್ತಾಯಿಸುತ್ತಿದ್ದ ಆತ, ಇದಕ್ಕೆ ಒಪ್ಪದಿದ್ದರೆ ಕಲಬುರಗಿಯಲ್ಲಿ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಆಗಸ್ಟ್ 7ರಂದು ರಾತ್ರಿ ಮಹಿಳೆಯ ಮನೆಗೆ ಬಂದ ಆರೋಪಿ, ಆಕೆಯ ಮುಖಕ್ಕೆ ಹೊಡೆದು ಚಾಕು ತೋರಿಸಿ ಬೆದರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದು, ಬಳಿಕ ಬಟ್ಟೆಗಳನ್ನು ತೊಳೆಯುವಂತೆ ಸೂಚಿಸಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಮಹಿಳೆ ಹಾಗೂ ಆಕೆಯ ಕುಟುಂಬದವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ನವೆಂಬರ್ 15ರಂದು ಮಹಿಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)-2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.








