
ವಿಟ್ಲ: ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಲು ಯತ್ನಿಸಿದ ಪತಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪುಣಚದಲ್ಲಿ 2024ರ ಡಿಸೆಂಬರ್ 11ರಂದು ಈ ಘಟನೆ ನಡೆದಿತ್ತು. ಅಂದು ರಾತ್ರಿ ಮಹಿಳೆಯ ಪತಿ ಸಂಜೀವ ನಾಯ್ಕ, ತನ್ನ ಪತ್ನಿಗೆ ಹೃದಯಾಘಾತವಾಗಿದ್ದು ಕುಸಿದು ಬಿದ್ದಿದ್ದಾರೆ ಎಂದು ನೆರೆಮನೆಯವರಿಗೆ ತಿಳಿಸಿದ್ದ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಆದರೆ, ಅಲ್ಲಿ ಅವರು ಮೃತಪಟ್ಟಿದ್ದರು. ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಪ್ರಕರಣವು ಸಂಶಯಾಸ್ಪದವಾಗಿತ್ತು.ಈ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣದ ಬದಲಾಗಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಪ್ರಕರಣದ ತನಿಖಾಧಿಕಾರಿಯಾಗಿದ್ದ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್.ಇ. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿ ಸಂಜೀವ ನಾಯ್ಕ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 105ರ ಭಾಗ 2ರ ಅಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದ್ದಾರೆ.

ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ.ಅಲ್ಲದೆ, BNS ಸೆಕ್ಷನ್ 240ರ ಅಡಿಯಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಲಯ ಆದೇಶಿಸಿದೆ.ಪ್ರಕರಣದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.








