
ಪುತ್ತೂರು: ಮಾಡ್ನೂರು ಕಾವು ಎಂಬಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಅಂತರ್ ರಾಜ್ಯ ಕಳ್ಳತನದಲ್ಲಿ ತೊಡಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ಮಾಡ್ನೂರು ಕಾವು ಪ್ರದೇಶದಿಂದ ಓಮ್ನಿ ಕಾರು ಕಳ್ಳತನವಾಗಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ, ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ (24) ಎಂಬವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು ₹2.5 ಲಕ್ಷ ಮೌಲ್ಯದ ಕಳ್ಳತನವಾಗಿದ್ದ ಓಮ್ನಿ ಕಾರು ಹಾಗೂ ಕಳ್ಳತನಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ಓಮ್ನಿ ಕಾರನ್ನು ಕದ್ದು ಕೇರಳಕ್ಕೆ ಕೊಂಡೊಯ್ದು, ಬಳಿಕ ತಮಿಳುನಾಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ತಮಿಳುನಾಡಿನಲ್ಲಿ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿಯೂ ಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ಗುಣಪಾಲ ಜೆ. ಮತ್ತು ಸುಷ್ಮಾ ಜಿ. ಭಂಡಾರಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.








