
ಬಳ್ಳಾರಿ: ಗ್ರಾಮೀಣ ಪ್ರದೇಶಗಳಲ್ಲಿಯೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವೈದ್ಯರು ಮತ್ತು ಸಿಬ್ಬಂದಿ ನೇಮಕಾತಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.


ನಗರದಲ್ಲಿ ರವಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಸಾವಿರ ವೈದ್ಯರ ನೇಮಕಾತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನೇರ ನೇಮಕಾತಿಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಈಗಾಗಲೇ 250 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ. ಉಳಿದ ಹುದ್ದೆಗಳ ಭರ್ತಿ ಪ್ರಕ್ರಿಯೆ ಮುಂದುವರಿದಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸದಾಗಿ 350 ಆಂಬ್ಯುಲೆನ್ಸ್‌ಗಳನ್ನು ಖರೀದಿಸಲಾಗುತ್ತಿದ್ದು, ಪ್ರಸ್ತುತ 450 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಗ್ರಾಮೀಣ ಭಾಗದ ಯಾವುದೇ ಹಳ್ಳಿಗೂ 20ರಿಂದ 25 ನಿಮಿಷಗಳೊಳಗೆ ಆಂಬ್ಯುಲೆನ್ಸ್ ತಲುಪಿಸುವ ಗುರಿ ಹೊಂದಲಾಗಿದೆ. ನಿಗದಿತ ಸಮಯಕ್ಕೆ ಆಂಬ್ಯುಲೆನ್ಸ್ ತಲುಪದಿದ್ದರೆ ಸಂಬಂಧಪಟ್ಟವರಿಗೆ 3 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದರ ಜೊತೆಗೆ ಪ್ರತಿ ಆಸ್ಪತ್ರೆಯಲ್ಲೂ ಕನಿಷ್ಠ ಐದು ಐಸಿಯು ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಲಾಗಿದೆ. ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ಸುಧಾರಣೆಗೂ ಆದ್ಯತೆ ನೀಡಲಾಗುತ್ತಿದೆ ಎಂದರು.
ಮಹಿಳೆಯರ ಆರೋಗ್ಯ, ಹೆರಿಗೆ ಮತ್ತು ತಾಯಂದಿರ ಆರೋಗ್ಯದ ದೃಷ್ಟಿಯಿಂದ ಪ್ರತ್ಯೇಕ ವಿಭಾಗದೊಂದಿಗೆ ಮಹಿಳಾ ಆರೋಗ್ಯ ನೀತಿ ರೂಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಹೆಚ್ಚಾಗಿ ನಗರ ಪ್ರದೇಶಗಳಿಗೆ ಸೀಮಿತವಾಗಿರುವುದರಿಂದ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಆಸ್ಪತ್ರೆಗಳೇ ಪ್ರಮುಖ ಆಧಾರವಾಗಿವೆ ಎಂದು ಹೇಳಿದರು.
ಆರೋಗ್ಯ ಸಿಬ್ಬಂದಿಯ ವೇತನ ವಿಳಂಬ ಸಮಸ್ಯೆ ಹಾಗೂ ಔಷಧಿಗಳ ಕೊರತೆಯನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ಎರಡು ತಿಂಗಳೊಳಗೆ ಆರೋಗ್ಯ ಇಲಾಖೆಯ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಸಚಿವ ಖಾದರ್ ಭರವಸೆ ನೀಡಿದರು.








