Saturday, August 22, 2026
spot_imgspot_img
spot_imgspot_img

ಪುತ್ತೂರಿನಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಗಲಾಟೆ: ಎರಡೂ ಕಡೆಯಿಂದ ದೂರು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ ದಾಖಲು-ಓರ್ವನ ಬಂಧನ

- Advertisement -
- Advertisement -


ಪುತ್ತೂರು: ನಗರದ ದರ್ಬೆ ಜಂಕ್ಷನ್‌ ಬಳಿ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ದಾಖಲಾತಿ ಲ್ಯಾಮಿನೇಷನ್ ವಿಚಾರಕ್ಕೆ ಸಂಬಂಧಿಸಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.


ಪೊಲೀಸ್ ಮಾಹಿತಿ ಪ್ರಕಾರ, ಸುಳ್ಯ ಜಾಲ್ಸೂರು ನಿವಾಸಿ ಫಾತಿಮತ್ ಮಿಸ್ವಾನ (32) ಅವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಬಂದಿದ್ದ ವೇಳೆ ದರ್ಬೆಯಲ್ಲಿರುವ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದಲ್ಲಿ ಕೆಲವು ದಾಖಲಾತಿಗಳನ್ನು ಪ್ರಿಂಟ್ ಹಾಗೂ ಲ್ಯಾಮಿನೇಷನ್ ಮಾಡಲು ನೀಡಿದ್ದರು. ಈ ಪೈಕಿ ಒಂದು ದಾಖಲಾತಿ ಹಾನಿಯಾಗಿದ್ದ ಹಿನ್ನೆಲೆಯಲ್ಲಿ ಅದನ್ನು ಸರಿಪಡಿಸಬೇಕು ಅಥವಾ ಹೊಸ ದಾಖಲಾತಿಗಾಗಿ ₹300 ನೀಡಬೇಕು ಎಂದು ಅವರು ಕೇಳಿದ್ದರು ಎನ್ನಲಾಗಿದೆ.


ಈ ವೇಳೆ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ ಪೈ ಅವರು ಅವಾಚ್ಯವಾಗಿ ನಿಂದಿಸಿದ್ದು, ಸುದರ್ಶನ ಪೈ ಅವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಫಾತಿಮತ್ ಮಿಸ್ವಾನ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ. 97/2026ರಂತೆ BNS ಕಲಂ 352, 115(2), 109 ಹಾಗೂ 3(5)ರಡಿ ಪ್ರಕರಣ ದಾಖಲಾಗಿದ್ದು, ಸುದರ್ಶನ ಪೈ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಇದೇ ಘಟನೆಗೆ ಸಂಬಂಧಿಸಿ ಡ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ (50) ಅವರು ನೀಡಿದ ದೂರಿನ ಆಧಾರದ ಮೇಲೂ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಲ್ಯಾಮಿನೇಷನ್‌ಗಾಗಿ ನೀಡಿದ್ದ ದಾಖಲಾತಿ ತಾಂತ್ರಿಕ ದೋಷದಿಂದ ಹಾನಿಯಾಗಿದ್ದ ವಿಚಾರದಲ್ಲಿ ಕೆಲವರು ಅಂಗಡಿಗೆ ಬಂದು ಗಲಾಟೆ ನಡೆಸಿ, ದಾಖಲಾತಿಗಳನ್ನು ನೀಡಬೇಕು ಅಥವಾ ₹10 ಸಾವಿರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ ವಿಡಿಯೋ ಮಾಡಲು ಯತ್ನಿಸಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದ್ದು, ಜೀವ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಈ ದೂರಿನ ಮೇರೆಗೆ ಫಾತಿಮತ್ ಮಿಸ್ವಾನ, ಮುಬಾಶಿರಾ, ಮುಬಾರಿಶ್ ಹಾಗೂ ನೌಶಾದ್ ವಿರುದ್ಧ ಅ.ಕ್ರ. 98/2026ರಂತೆ BNS ಕಲಂ 115(2), 352, 351(2), 79 ಹಾಗೂ 3(5)ರಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


ಇನ್ನು ಗಲಾಟೆ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜಾ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಜನರನ್ನು ಚದುರಿಸುವ ವೇಳೆ ಕೆಲವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಲಾಟೆಗೆ ಸಂಬಂಧಿಸಿ ಕೆಲವರನ್ನು ಠಾಣೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ನಿಯಾಝ್, ನೌಶಾದ್ ಹಾಗೂ ಇತರರು ತಡೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.


ಈ ಹಿನ್ನೆಲೆಯಲ್ಲಿ ಅ.ಕ್ರ. 99/2026ರಂತೆ BNS ಕಲಂ 132, 121(1) ಹಾಗೂ 3(5)ರಡಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!