
ಮಂಗಳೂರು: ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವರ್ಷ 150 ಕಾಲೇಜುಗಳ ಒಟ್ಟು 8,310 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 98 ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಬಳಕೆಯ ಪಾಸಿಟಿವ್ ಫಲಿತಾಂಶ ಕಂಡುಬಂದಿದ್ದು, ಬಳಿಕ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಮೂಲಕ ಅವರಿಗೆ ಕೌನ್ಸೆಲಿಂಗ್ ನೀಡಲಾಗಿತ್ತು.ಆರಂಭಿಕ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸುವ ಹಾಗೂ ವಿದ್ಯಾರ್ಥಿಗಳಲ್ಲಿ ಬದಲಾವಣೆಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ನಿನ್ನೆ ಮರುಪರೀಕ್ಷೆ ನಡೆಸಲಾಯಿತು.
ಮೊದಲ ಹಂತದಲ್ಲಿ ಪಾಸಿಟಿವ್ ಬಂದಿದ್ದ ವಿದ್ಯಾರ್ಥಿಗಳ ಪೈಕಿ 50 ಮಂದಿಯನ್ನು ಮತ್ತೆ ಪರೀಕ್ಷೆಗೆ ಒಳಪಡಿಸಲಾಯಿತು.ಈ ಪೈಕಿ 38 ವಿದ್ಯಾರ್ಥಿಗಳು ನೆಗೆಟಿವ್ ಬಂದಿದ್ದು, ತಾವು ಮಾದಕ ವಸ್ತುಗಳ ಬಳಕೆಯನ್ನು ನಿಲ್ಲಿಸಿರುವುದಾಗಿ ತಿಳಿಸಿದ್ದಾರೆ. ಆರಂಭಿಕ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದ್ದವರಲ್ಲಿ ಶೇ.75ಕ್ಕೂ ಹೆಚ್ಚು ಮಂದಿ ಇದೀಗ ನೆಗೆಟಿವ್ ಬಂದಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಇನ್ನು ಮರುಪರೀಕ್ಷೆಯಲ್ಲೂ ಪಾಸಿಟಿವ್ ಬಂದಿರುವ 12 ವಿದ್ಯಾರ್ಥಿಗಳ ಕೌನ್ಸೆಲಿಂಗ್‌ನ್ನು ಪೋಷಕರು ಹಾಗೂ ಕಾಲೇಜು ಆಡಳಿತ ಮಂಡಳಿಗಳು ನಿಕಟವಾಗಿ ಮುಂದುವರಿಸುವಂತೆ ಸೂಚಿಸಲಾಗಿದೆ.








