Sunday, November 8, 2026
spot_imgspot_img
spot_imgspot_img

ಬಡ ದಂಪತಿಗಳಿಗೆ ಸಿಹಿ ಸುದ್ದಿ: ರಾಜ್ಯದ 4 ಸರಕಾರಿ ಆಸ್ಪತ್ರೆಗಳಲ್ಲಿ ಐವಿಎಫ್ ಕೇಂದ್ರ ಆರಂಭ –ಮಂಗಳೂರಿನ ಲೇಡಿಗೋಶನ್‌ಗೂ ಸೌಲಭ್ಯ – ಸಚಿವ ಯು.ಟಿ. ಖಾದರ್

- Advertisement -
- Advertisement -

ಮಂಗಳೂರು: ಬಡ ಹಾಗೂ ಮಧ್ಯಮ ವರ್ಗದ ದಂಪತಿಗಳಿಗೆ ಸಂತಾನ ಭಾಗ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇರಿಸಿದ್ದು, ರಾಜ್ಯದಲ್ಲಿ ಪ್ರಥಮ ಬಾರಿಗೆ ಮಂಗಳೂರು ಸೇರಿದಂತೆ ನಾಲ್ಕು ಸರಕಾರಿ ಆಸ್ಪತ್ರೆಗಳಲ್ಲಿ ಐವಿಎಫ್ (ಕೃತಕ ಗರ್ಭಧಾರಣಾ ಚಿಕಿತ್ಸೆ) ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ..

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ ಸೇರಿದಂತೆ ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಅಥವಾ ಬೆಳಗಾವಿಯಲ್ಲಿ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ಸರಕಾರ ತೀರ್ಮಾನಿಸಿದೆ ಎಂದರು.ಪ್ರಸ್ತುತ ಖಾಸಗಿ ಆಸ್ಪತ್ರೆಗಳಲ್ಲಿ ಐವಿಎಫ್ ಚಿಕಿತ್ಸೆಗೆ ಸುಮಾರು 4 ಲಕ್ಷ ರೂ. ವೆಚ್ಚವಾಗುತ್ತಿದೆ. ಈ ಹಿಂದೆ ಸರಕಾರದಿಂದ 60 ಸಾವಿರ ರೂ. ಆರ್ಥಿಕ ನೆರವು ನೀಡಲಾಗುತ್ತಿತ್ತು. ಆದರೂ ಉಳಿದ ದೊಡ್ಡ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಆರ್ಥಿಕವಾಗಿ ಹಿಂದುಳಿದ ದಂಪತಿಗಳಿಗೆ ಈ ವೆಚ್ಚ ಭರಿಸುವುದು ಕಷ್ಟವಾಗುತ್ತಿದ್ದು, ಇದರಿಂದ ಅವರು ಸಾಮಾಜಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಸರಕಾರಿ ಆಸ್ಪತ್ರೆಗಳಲ್ಲೇ ಈ ಸೌಲಭ್ಯ ಲಭ್ಯವಾದರೆ ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.ಬೈಂದೂರು ಮತ್ತು ಮೂಡುಬಿದಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ 25 ಕೋಟಿ ರೂ. ವೆಚ್ಚದಲ್ಲಿ ತಾಲೂಕು ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಯೋಜನೆಯೂ ಸರಕಾರದ ಮುಂದಿದೆ ಎಂದು ತಿಳಿಸಿದರು.ಎಸ್‌ಐಆರ್ ಪ್ರಕ್ರಿಯೆ ಕುರಿತು ಪ್ರತಿಕ್ರಿಯಿಸಿದ ಅವರು, ಚುನಾವಣಾ ಆಯೋಗದ ಮೂಲಕ ನೇಮಕಗೊಂಡ ಅಧಿಕಾರಿಗಳು ಈ ಪ್ರಕ್ರಿಯೆಗೆ ನೇರ ಹೊಣೆಗಾರರಾಗಿರುತ್ತಾರೆ. ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಜನಪ್ರತಿನಿಧಿಗಳು ಸಹಕರಿಸಬೇಕು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂಬುದು ನಮ್ಮ ಕಾಳಜಿಯಾಗಿದೆ.

ಈ ಸಂಬಂಧ ಯಾವುದೇ ದೂರುಗಳಿದ್ದರೆ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ಅಧಿಕಾರಿಗಳು ಈ ಬಗ್ಗೆ ಸೂಕ್ತ ಸ್ಪಷ್ಟನೆ ನೀಡಬೇಕಾಗಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು ಉಪಸ್ಥಿತರಿದ್ದರು.

- Advertisement -

Related news

error: Content is protected !!