


ಮಂಗಳೂರು: ಬೆಂಗಳೂರು ಮತ್ತು ಕರ್ನಾಟಕ ಕರಾವಳಿಯನ್ನು ಸಂಪರ್ಕಿಸುವ ಬಹುನಿರೀಕ್ಷಿತ ಬೆಂಗಳೂರು–ಮಂಗಳೂರು–ಉಡುಪಿ–ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.ಬೆಂಗಳೂರಿನಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಇದೇ ವೇಳೆ ಮಂಗಳೂರು ಜಂಕ್ಷನ್‌ನಲ್ಲೂ ಸಾಂಕೇತಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕರಾವಳಿ ಭಾಗದ ಸಂಸದರು ಭಾಗವಹಿಸಲಿದ್ದಾರೆ.
ಕಳೆದ ಒಂದು ವರ್ಷದಿಂದ ಮಂಗಳೂರು–ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲು ಇದೀಗ ಬೆಂಗಳೂರಿನ ಯಶವಂತಪುರದವರೆಗೆ ವಿಸ್ತರಣೆಯಾಗುತ್ತಿದೆ. ಇದರಿಂದ ಬೆಂಗಳೂರು, ಮಂಗಳೂರು, ಉಡುಪಿ, ಕಾರವಾರ ಸೇರಿದಂತೆ ಕರಾವಳಿ ಭಾಗದ ಪ್ರಯಾಣಿಕರಿಗೆ ಗೋವಾದ ಮಡಗಾಂವ್‌ಗೆ ನೇರ ರೈಲು ಸಂಪರ್ಕ ದೊರೆಯಲಿದೆ.ನವೆಂಬರ್ 15ರಿಂದ ಬೆಂಗಳೂರು ಮತ್ತು ಮಡಗಾಂವ್ ನಡುವೆ ಎರಡೂ ದಿಕ್ಕಿನಲ್ಲಿ ರೈಲಿನ ನಿಯಮಿತ ಸಂಚಾರ ಆರಂಭವಾಗಲಿದೆ. ಯಶವಂತಪುರದಿಂದ ಬೆಳಗ್ಗೆ 7.35ಕ್ಕೆ ಹೊರಡುವ ರೈಲು ರಾತ್ರಿ 8.55ಕ್ಕೆ ಮಡಗಾಂವ್ ತಲುಪಲಿದೆ.
ಮಡಗಾಂವ್‌ನಿಂದ ಬೆಳಗ್ಗೆ 8.20ಕ್ಕೆ ಹೊರಡುವ ರೈಲು ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.ಈ ರೈಲು ಶ್ರವಣಬೆಳಗೊಳ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕ ಪುತ್ತೂರು, ಮಂಗಳೂರು ಜಂಕ್ಷನ್, ಉಡುಪಿ, ಕುಂದಾಪುರ, ಬೈಂದೂರು, ಮುರ್ಡೇಶ್ವರ, ಗೋಕರ್ಣ ರಸ್ತೆ ಹಾಗೂ ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.2019ರಿಂದಲೇ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಆರಂಭಿಸುವ ಪ್ರಸ್ತಾಪವಿತ್ತು. ಸಕಲೇಶಪುರ–ಸುಬ್ರಹ್ಮಣ್ಯ ಘಾಟ್ ವಿಭಾಗದ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಳ್ಳದ ಕಾರಣ ಯೋಜನೆ ವಿಳಂಬವಾಗಿತ್ತು.
ಇದೀಗ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಹಾದಿ ಸುಗಮವಾಗಿದೆ.ಕರಾವಳಿ ಭಾಗದ ಜನರ ಬಹುದಿನಗಳ ನಿರೀಕ್ಷೆ ಇದೀಗ ನನಸಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.








