
ಗ್ರೇಟರ್ ನೋಯ್ಡಾ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ತಾಯಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಬಳಿಕ, ತಾನು ವಾಸಿಸುತ್ತಿದ್ದ ಅಪಾರ್ಟ್‌ಮೆಂಟ್‌ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೊಯ್ದಾದ ಬಿಶ್ರಾಖ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.ಮೃತನನ್ನು ಸಾಗರ್ ಯಾದವ್ ಎಂದು ಗುರುತಿಸಲಾಗಿದೆ. ಆತ ರಾಧಾ ಸೈ ಗಾರ್ಡನ್ ಸೊಸೈಟಿಯಲ್ಲಿ ತನ್ನ ಪೋಷಕರು ಹಾಗೂ ಕಿರಿಯ ಸಹೋದರನೊಂದಿಗೆ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಸಾಗರ್ ಮತ್ತು ಆತನ ತಾಯಿಯ ನಡುವೆ ಶನಿವಾರ ವಾಗ್ವಾದ ನಡೆದಿದೆ. ಈ ವೇಳೆ ಆತ ಚಾಕುವಿನಿಂದ ತಾಯಿಗೆ ಇರಿದು ಗಾಯಗೊಳಿಸಿದ್ದಾನೆ. ಬಳಿಕ ತಾನು ವಾಸಿಸುತ್ತಿದ್ದ ಫ್ಲ್ಯಾಟ್‌ನ ಐದನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ.’ಸಾಗರ್ ಯಾದವ್ ಮಾನಸಿಕವಾಗಿ ಅಸ್ವಸ್ಥನಾಗಿದ್ದ. ಶನಿವಾರ ಆತ ಹಾಗೂ ಆತನ ತಾಯಿಯ ನಡುವೆ ವಾಗ್ವಾದ ನಡೆದಿತ್ತು. ಈ ವೇಳೆ ಆತ ತಾಯಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ನಂತರ ಫ್ಲಾಟ್‌ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪೋಷಕರು ತಿಳಿಸಿದ್ದಾರೆ’ ಎಂದು ಬಿಶ್ರಾಖ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಾಗರ್‌ನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ.ಚಾಕು ಇರಿತದಿಂದ ಗಾಯಗೊಂಡಿರುವ ಆತನ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ಸಾಗರ್‌ನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.








