Friday, November 13, 2026
spot_imgspot_img
spot_imgspot_img

48 ಗಂಟೆಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೆ ಸರ್ಕಾರಿ ನೌಕರ ಸ್ವಯಂ ಅಮಾನತು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

- Advertisement -
- Advertisement -

ನವದೆಹಲಿ: ಸರ್ಕಾರಿ ನೌಕರನೊಬ್ಬ ಯಾವುದೇ ಕ್ರಿಮಿನಲ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 48 ಗಂಟೆಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದರೆ, ಅವರನ್ನು ನಿಯಮಾನುಸಾರ ಸ್ವಯಂ ಅಮಾನತುಗೊಂಡವರು ಎಂದು ಪರಿಗಣಿಸಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ಅಮಾನತು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನಮೋಹನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಬಿಹಾರದ ಸಮಷ್ಟಿಪುರ ಸದರ್ ಆಸ್ಪತ್ರೆಯ ಆಡಳಿತಾಧಿಕಾರಿ ವಿಶ್ವಜೀತ್ ಸಿಂಗ್ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಬಾಕಿ ವೇತನ ಬಿಡುಗಡೆ ಮಾಡಲು 36,421 ರೂ. ಮೊತ್ತಕ್ಕೆ ಸಂಬಂಧಿಸಿದಂತೆ 4,000 ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ವಿಶ್ವಜೀತ್ ಸಿಂಗ್ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ಅವರು ಸುಮಾರು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದರು.ಈ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, 48 ಗಂಟೆಗಳಿಗಿಂತ ಹೆಚ್ಚು ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಸರ್ಕಾರಿ ನೌಕರನನ್ನು ನಿಯಮಾನುಸಾರ ಸ್ವಯಂ ಅಮಾನತುಗೊಂಡವರು ಎಂದು ಪರಿಗಣಿಸಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದೆ.ಇದೇ ವೇಳೆ, ಬಂಧನದ ಬಳಿಕ ವಿಶ್ವಜೀತ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿತ್ತು. ಆದರೆ ಬಳಿಕ ಅಮಾನತು ಆದೇಶವನ್ನು ಹಿಂಪಡೆದು, ಮತ್ತೆ ಅದೇ ಆಸ್ಪತ್ರೆಯಲ್ಲಿ ಅದೇ ಹುದ್ದೆಗೆ ನೇಮಕ ಮಾಡಿರುವ ವಿಚಾರವನ್ನು ನ್ಯಾಯಪೀಠ ಪ್ರಶ್ನಿಸಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ರಾಜ್ಯ ಸರ್ಕಾರವು ಈ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಪ್ರಕರಣದ ಮತ್ತೊಂದು ಬೆಳವಣಿಗೆಯಲ್ಲಿ, ವಿಶ್ವಜೀತ್ ಸಿಂಗ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ಸುಮಾರು ಒಂದು ವರ್ಷದ ಬಳಿಕ ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿ, ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನನ್ನು ಮರುಸ್ಥಾಪಿಸಿದೆ.

- Advertisement -

Related news

error: Content is protected !!