

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಅಕ್ರಮಗಳು ನಿಲ್ಲಸಬೇಕು ಎಂದು ನುಡಿದಿರುವ ಕರ್ನಾಟಕ ಹೈಕೋರ್ಟ್, ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಮತ್ತು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಬಯಸಿ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಸುಳ್ಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.

ಕೆಪಿಎಸ್‌ಸಿ ನೇಮಕಾತಿ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್, ಡಾ.ಮಂಜುನಾಥ್ ಸಲ್ಲಿಸಿರುವ ಅರ್ಜಿ ಮತ್ತು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಲೋಕೇಶ್ ಸೇರಿದಂತೆ ಹಲವು ಯಶಸ್ವಿ ಅಭ್ಯರ್ಥಿಗಳು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿ ವಿಚಾರಣೆ ವೇಳೆ ಲೋಕೇಶ್ ಪರ ವಕೀಲರು, ಅರ್ಜಿದಾರರ ಮನೆಯಲ್ಲಿ ಈಡಿ ಶೋಧ ನಡೆಸಿತು. ಮನೆಯಲ್ಲಿಯೇ 20 ಅಂಕಗಳಿಗೆ ಟೆಸ್ಟ್ ನೀಡಿತು. ಎಫ್‌ಐಆರ್ ಬಾಕಿಯಿರುವುದರಿಂದ ಅರ್ಜಿದಾರರು ಸರಕಾರಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಸರಕಾರಿ ಅಭಿಯೋಜಕರು ಸೋಮವಾರದೊಳಗೆ ಅರ್ಜಿಗಳಿಗೆ ಆಕ್ಷೇಪಣೆ ಸಲ್ಲಿಸಬೇಕು. ಆ.27 ಅರ್ಜಿಯನ್ನು ಮತ್ತೆ ವಿಚಾರಣೆಗೆ ತೆಗೆದುಕೊಳ್ಳಲಾಗುವುದು. ಪೊಲೀಸರು ಪ್ರಕರಣದ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆ ಮುಂದೂಡಿತು.








