



ವಿಟ್ಲ ಪಟ್ಟಣ ಪಂಚಾಯತ್ ನ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ನೀಡಲಾಗುತ್ತಿದ್ದ ಶೇ.5 ರಿಯಾಯಿತಿಯ ಅವಧಿಯನ್ನು ಮೇ 31, 2026ರವರೆಗೆ ವಿಸ್ತರಿಸಿದೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, 2026-27 ನೇ ಸಾಲಿನಲ್ಲಿ ಶೇ.5ರ ರಿಯಾಯಿತಿಯನ್ನು ವಿಸ್ತರಿಸಿದಲ್ಲಿ, ತೆರಿಗೆ ಪಾವತಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರೋತ್ಸಾಹ ನೀಡಿದಂತಾಗುತ್ತದೆ ಹಾಗೂ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ನಿರೀಕ್ಷಿಸಬಹುದಾಗಿದ್ದು, ನಗರ ಸ್ಥಳೀಯ ಸಂಸ್ಥೆಗಳಿಗೆ ಆರ್ಥಿಕವಾಗಿ ಸಹಾಯವಾಗಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸಾರ್ವಜನಿಕರ ಹಿತದೃಷ್ಟಿಯಿಂದ 2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5%ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ದಿನಾಂಕ 31.05.2026 ರವರೆಗೆ ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಕಲಂ 105(1)ರ ಅನ್ವಯ ವಿಸ್ತರಿಸಿ ಆದೇಶಿಸಿದೆ.
2026-27ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಧಿಯನ್ನು ಆರ್ಥಿಕ ವರ್ಷ 2026-27 ಸಾಲಿಗೆ ಮಾತ್ರ ಅನ್ವಯವಾಗುವಂತೆ ಮೇ 31 ರ ವರೆಗೆ ವಿಸ್ತರಿಸಿ ಆದೇಶಿಸಿದೆ ಎಂದು ವಿಟ್ಲ ಪಟ್ಟಣ ಪಂಚಾಯತ್ ನ ಮುಖ್ಯಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.








