




ನೆಲ್ಯಾಡಿ: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್. ವಿ. (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಗಿರೀಶ್ ಎಂದು ಗುರುತಿಸಲಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯದಿಂದ ಕೊಕ್ಕಡ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದು, ಪೆರಿಯಶಾಂತಿ ಸಮೀಪ ತಮ್ಮ ಬೈಕನ್ನು ಕೊಕ್ಕಡದ ಕಡೆಗೆ ತಿರುಗಿಸುವ ವೇಳೆ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಬೈಕ್ ಢಿಕ್ಕಿ ಹೊಡೆದಿದೆ. ಆ ಬೈಕ್‌ನಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ರಿಜೇಶ್ ಅವರು ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗಿರೀಶ್ ಅವರನ್ನು ಸ್ಥಳೀಯರು ಹಾಗೂ ಸಾರ್ವಜನಿಕರ ಸಹಕಾರದಿಂದ ತಕ್ಷಣ ರಕ್ಷಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ರಿಜೇಶ್ ಅವರ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿದಿದೆ.








