

ತಿಪಟೂರು: ಕರ್ನಾಟಕದ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ, ಹಿರಿಯ ಬಿಜೆಪಿ ನಾಯಕ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಆರ್ಎಸ್ಎಸ್ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದಿದ್ದ ನಾಗೇಶ್ ಅವರು 2008 ಹಾಗೂ 2018ರಲ್ಲಿ ತಿಪಟೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ, ಸಮವಸ್ತ್ರ ನಿಯಮ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದರು.

ಕಳೆದ ಒಂದು ವರ್ಷದಿಂದ ಬ್ರೈನ್ ಟ್ಯೂಮರ್ನಿಂದ ಬಳಲುತ್ತಿದ್ದ ಅವರಿಗೆ ಎರಡು ಬಾರಿ ಶಸ್ತ್ರಚಿಕಿತ್ಸೆ ನಡೆದಿತ್ತು.
ಬೆಂಗಳೂರಿನಲ್ಲಿರುವ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದ ಅವರ ಪಾರ್ಥಿವ ಶರೀರವನ್ನು ತಿಪಟೂರಿಗೆ ಕೊಂಡೊಯ್ಯಲಾಗುತ್ತಿದ್ದು, ನಾಳೆ ಸ್ವಕ್ಷೇತ್ರ ತಿಪಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅವರು ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.








