

ಮಂಗಳೂರು, ಜು.10: ಬೀದಿಬದಿ ವ್ಯಾಪಾರಿಗಳಿಗೆ ಸಂಡೆ ಬಜಾರ್‌ನಲ್ಲಿ ವ್ಯಾಪಾರಕ್ಕೆ ಮುಕ್ತ ಅವಕಾಶ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಸುತ್ತಿದ್ದ 24 ಗಂಟೆಗಳ ಧರಣಿ ಸತ್ಯಾಗ್ರಹ ಶುಕ್ರವಾರ ಅಂತ್ಯಗೊಂಡಿತು. ಧರಣಿ ಮುಕ್ತಾಯದ ಬಳಿಕ ಪ್ರತಿಭಟನಾಕಾರರು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಧರಣಿ ಸ್ಥಳಕ್ಕೆ ಪಾಲಿಕೆ ಆಯುಕ್ತರು ಆಗಮಿಸಿ ಮನವಿ ಸ್ವೀಕರಿಸದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳು ಭೇಟಿ ನೀಡುವವರೆಗೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದ ವ್ಯಾಪಾರಿಗಳನ್ನು ಪೊಲೀಸರು ಸಮಾಧಾನಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಸೂಚನೆಯಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಮನವಿ ಸ್ವೀಕರಿಸಿ ವ್ಯಾಪಾರಿಗಳ ಸಮಸ್ಯೆ ಆಲಿಸಿದರು.ಈ ವೇಳೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಜ್, ಕಳೆದ ಒಂದು ತಿಂಗಳಿನಿಂದ ಸಂಡೆ ಬಜಾರ್ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ಸಿಗದೇ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿದರು.

ಮುಂದಿನ ರವಿವಾರವೂ ವ್ಯಾಪಾರಕ್ಕೆ ಅವಕಾಶ ನೀಡದೆ ತೆರವು ಕಾರ್ಯಾಚರಣೆ ನಡೆಸಿದರೆ ‘ಜೈಲ್ ಭರೋ’ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಯಥಾಸ್ಥಿತಿ ಮುಂದುವರಿಸಬೇಕು ಎಂದು ಅವರು ಆಗ್ರಹಿಸಿದರು.
ಸಂಘದ ಕಾರ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಪಾಲಿಕೆ ಆಯುಕ್ತರು ಕಾನೂನುಬದ್ಧವಾಗಿ ನಡೆದುಕೊಳ್ಳಬೇಕು ಹಾಗೂ ವ್ಯಾಪಾರಿಗಳೊಂದಿಗೆ ಕಠೋರವಾಗಿ ವರ್ತಿಸಬಾರದು ಎಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಬೀದಿಬದಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.







