
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.



ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ ‘ಸನಾತನಿ ಸಿಂಹ’ ಎಂಬ ಫೇಸ್‌ಬುಕ್ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೆಂಟ್ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ವಿಟ್ಲ ಪೊಲೀಸ್ ಠಾಣೆಯಲ್ಲಿ 2025ರ ಸೆಪ್ಟೆಂಬರ್ 18ರಂದು ಅಪರಾಧ ಸಂಖ್ಯೆ 131/2025ರಡಿ, ಭಾರತೀಯ ನ್ಯಾಯ ಸಂಹಿತೆ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಎಂಬಾತನನ್ನು ಜೂನ್ 27, 2026ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಪ್ರಾಥಮಿಕ ತನಿಖೆಯಲ್ಲಿ, ಆರೋಪಿತನ ವಿರುದ್ಧ ಈ ಹಿಂದೆಯೂ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ ಮಾಡಿದ ಆರೋಪಕ್ಕೆ ಸಂಬಂಧಿಸಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಏಳು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.








