

ಚಾಮರಾಜನಗರ: ಕಿಡಿಗೇಡಿಗಳು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಹುಸಿ ಬಾಂಬ್ ಇ-ಮೇಲ್ ಸಂದೇಶವನ್ನು ಕಳುಹಿಸಿದ್ದು, ನ್ಯಾಯಾಧೀಶರು, ವಕೀಲರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯಕ್ಕೆ ಕಳೆದ ಎರಡು ದಿನಗಳ ಹಿಂದೆ ಕಿಡಿಗೇಡಿಗಳು ಹುಸಿ ಬಾಂಬ್ ಇ-ಮೇಲ್ ಸಂದೇಶವನ್ನು ಕಳುಹಿಸಿದ್ದು, ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದರು. ಈ ವೇಳೆ ಎಲ್ಲರನ್ನೂ ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಜಿಲ್ಲಾ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕ್ವಾಡ್‌ಗಳ ಮೂಲಕ ಪರಿಶೀಲನೆ ನಡೆಸಲಾಗಿತ್ತು.ಈಗ ಮತ್ತೊಮ್ಮೆ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಇ-ಮೇಲ್ ಸಂದೇಶ ಬಂದಿದ್ದು, ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದ ಹೊರಗೆ ಕಳುಹಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಧ್ಯಾಹ್ನ 1 ಗಂಟೆಯ ವೇಳೆಗೆ ಬಾಂಬ್ ಸ್ಫೋಟವಾಗಲಿದೆ ಎಂಬ ಸಂದೇಶವನ್ನು ಕಳುಹಿಸಿದ್ದು, ಎಲ್ಲರೂ ಆತಂಕಗೊಂಡಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಅವರು ಮಾಹಿತಿ ನೀಡಿದರು.ನ್ಯಾಯಾಲಯಕ್ಕೆ ಜಿಲ್ಲಾ ಪೊಲೀಸ್ ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿ, ಇದೊಂದು ಹುಸಿ ಸಂದೇಶ ಎಂದು ದೃಢಪಡಿಸಿದರು.










