
ಬಂಟ್ವಾಳ: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸಿರುವುದನ್ನು ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸ್ವಾಗತಿಸಿದ್ದಾರೆ.ಬಂಟ್ವಾಳದಲ್ಲಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ‘ಬಿಸಿರೋಡ್ ಚಲೋ’ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, SIT ರಚನೆಯಾಗಿರುವುದು ಒಳ್ಳೆಯ ಬೆಳವಣಿಗೆ. ಆದರೆ ತನಿಖಾ ತಂಡದಲ್ಲಿರುವ ಕೆಲವು ಅಧಿಕಾರಿಗಳ ಬಗ್ಗೆ ಜನರಲ್ಲಿ ಸಣ್ಣ ಸಂಶಯವಿದೆ ಎಂದು ಹೇಳಿದರು.ಮಂಗಳೂರು ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಅವರ ಮೇಲೆ ವಿಶ್ವಾಸವಿದೆ. ಆದರೆ ಉಳಿದ ಕೆಲವು ಅಧಿಕಾರಿಗಳ ಬಗ್ಗೆ ಸಂಶಯವಿದ್ದು, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು ಎಂದು ಅವರು ಹೇಳಿದರು.



‘14 ವರ್ಷಗಳಿಂದ ಸೌಜನ್ಯಳ ಆತ್ಮ ಓಡಾಡುತ್ತಿದೆ’
ಕಳೆದ 14 ವರ್ಷಗಳಿಂದ ಸೌಜನ್ಯಳ ಆತ್ಮ ಓಡಾಡುತ್ತಿದೆ ಎಂದು ಹೇಳಿದ ಪ್ರಭಾಕರ ಭಟ್, ಪ್ರಕರಣದಲ್ಲಿ ಸೌಜನ್ಯಳಿಗೆ ನ್ಯಾಯ ಒದಗಿಸುವ ಕೆಲಸವಾಗಬೇಕು ಎಂದರು. SIT ಅಧಿಕಾರಿಗಳು ಯಾರ ಪ್ರಭಾವಕ್ಕೂ ಒಳಗಾಗದೆ ಸತ್ಯವನ್ನು ಹುಡುಕಬೇಕು. ಪ್ರಾಮಾಣಿಕ ತನಿಖೆ ನಡೆದರೆ ನೂರಕ್ಕೆ ನೂರು ಸತ್ಯ ಹೊರಬರಲಿದೆ ಎಂದು ಹೇಳಿದರು.ಸುಪ್ರೀಂ ಕೋರ್ಟ್ನ ನಿರ್ದೇಶನವನ್ನು ಉಲ್ಲೇಖಿಸಿದ ಅವರು, ಈ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ಹೊಸ SITನಲ್ಲಿ ಸೇರಿಸಬಾರದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ ಎಂದರು.
ಪ್ರಕರಣದಲ್ಲಿ ಈ ಹಿಂದೆ ಆರೋಪಿಯಾಗಿದ್ದ ಸಂತೋಷ್ ರಾವ್ ಅವರನ್ನು ಮತ್ತೆ ತನಿಖೆ ಅಥವಾ ವಿಚಾರಣೆಗೆ ಒಳಪಡಿಸಬಾರದು ಎಂಬುದನ್ನೂ ಕೋರ್ಟ್ ಹೇಳಿದೆ ಎಂದು ತಿಳಿಸಿದರು.‘ಬಲವಾದ ಅಧಿಕಾರಿಗಳಿದ್ದರೆ ವಿಶ್ವಾಸ ಹೆಚ್ಚುತ್ತಿತ್ತು’ಅಪರಾಧಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಪೊಲೀಸರಿಗೆ ಇದೆ. ಮಂಗಳೂರು ಪೊಲೀಸ್ ಆಯುಕ್ತರ ರೀತಿಯ ಇನ್ನಷ್ಟು ಬಲವಾದ ಅಧಿಕಾರಿಗಳನ್ನು SITನಲ್ಲಿ ಸೇರಿಸಿದ್ದರೆ ಜನರಲ್ಲಿ ಮತ್ತಷ್ಟು ವಿಶ್ವಾಸ ಮೂಡುತ್ತಿತ್ತು ಎಂದು ಪ್ರಭಾಕರ ಭಟ್ ಹೇಳಿದರು
.ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಕರ್ನಾಟಕ ಸರ್ಕಾರ ಐಜಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಐವರು ಸದಸ್ಯರ SIT ರಚಿಸಿದ್ದು, ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಎಚ್. ಸುಧೀರ್ ಕುಮಾರ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ತಂಡದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಿದೆ.








