Friday, September 4, 2026
spot_imgspot_img
spot_imgspot_img

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು: ಕೇರಳದಲ್ಲಿ ಆರೋಪಿ ಬಂಧನ

- Advertisement -
- Advertisement -

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ರಾಜ್ಯ ಕಳ್ಳತನದ ಆರೋಪಿಯೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಕೇರಳದ ಬದಿಯಡ್ಕದಲ್ಲಿ ಬಂಧಿಸಿದ್ದಾರೆ.

ಕೇರಳ ಕಾಸರಗೋಡು ನಿವಾಸಿ ಸತೀಶ (31) ಬಂಧಿತ ಆರೋಪಿ.ದೇವಸ್ಥಾನದ ಆಡಳಿತ ಪದಾಧಿಕಾರಿ ಬೆಟ್ಟಂಪಾಡಿ ನಿವಾಸಿ ವಿನೋದ್ ಕುಮಾರ ಬಿ. (44) ಅವರು ನೀಡಿದ ದೂರಿನಂತೆ, ಆ.24ರಂದು ರಾತ್ರಿ ದೇವಸ್ಥಾನದ ಹೊರಗಡೆ ಇಟ್ಟಿದ್ದ ಕಾಣಿಕೆ ಡಬ್ಬಿಯನ್ನು ಅಪರಿಚಿತ ವ್ಯಕ್ತಿ ಕಳವು ಮಾಡಿದ್ದ. ಆ.25ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದಾಗ ಡಬ್ಬಿ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ವ್ಯಕ್ತಿಯೊಬ್ಬರು ಡಬ್ಬಿಯನ್ನು ಎತ್ತಿಕೊಂಡು ಹೋಗುತ್ತಿರುವುದು ಪತ್ತೆಯಾಗಿತ್ತು.ಕಾಣಿಕೆ ಡಬ್ಬಿಯಲ್ಲಿ ಸುಮಾರು ₹4,500 ಹಣ ಇದ್ದಿರಬಹುದೆಂದು ಅಂದಾಜಿಸಲಾಗಿದ್ದು, ಡಬ್ಬಿಯ ಮೌಲ್ಯ ಸುಮಾರು ₹2,500 ಆಗಿತ್ತು. ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 110/2026, ಕಲಂ 305(e) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಪತ್ತೆಗಾಗಿ ತನಿಖಾ ತಂಡ ಕೇರಳದ ಕಿನ್ನಿಂಗಾರು, ಬದಿಯಡ್ಕ ಹಾಗೂ ಆದೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತನಿಖೆ ನಡೆಸಿತ್ತು. ಬಳಿಕ ಬದಿಯಡ್ಕದಲ್ಲಿ ಸತೀಶನನ್ನು ಬಂಧಿಸಿ, ಕಳವು ಮಾಡಿದ್ದ ಕಾಣಿಕೆ ಡಬ್ಬಿ ಹಾಗೂ ಕೃತ್ಯಕ್ಕೆ ಬಳಸಿದ್ದ ಅಂದಾಜು ₹1 ಲಕ್ಷ ಮೌಲ್ಯದ ಬೈಕ್‌ನ್ನು ವಶಪಡಿಸಿಕೊಂಡಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಸತೀಶನ ವಿರುದ್ಧ ಈಗಾಗಲೇ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣವೂ ದಾಖಲಾಗಿದೆ.

ಪುತ್ತೂರು ಉಪ ವಿಭಾಗದ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರ ನಿರ್ದೇಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣೆಯ ಪ್ರಭಾರ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಗುಣಪಾಲ ಜೆ. ಮತ್ತು ಸುಷ್ಮಾ ಜಿ. ಭಂಡಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಠಾಣೆಯ ಸಿಬ್ಬಂದಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಸಿಡಿಆರ್ ವಿಭಾಗದ ಸಂಪತ್ ಮತ್ತು ದಿವಾಕರ್ ಸಹಕರಿಸಿದ್ದರು.

- Advertisement -

Related news

error: Content is protected !!