Friday, September 18, 2026
spot_imgspot_img
spot_imgspot_img

ಮರಳು ದಂಧೆಗಾರರಿಗೆ ಬಿಗ್ ಶಾಕ್: ಗೂಂಡಾ ಕಾಯ್ದೆಯಡಿ ಕ್ರಮಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ-– ವಿಫಲ ಅಧಿಕಾರಿಗಳಿಗೂ ಶಿಸ್ತು ಕ್ರಮ!

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಅಕ್ರಮ ಮರಳು ಸಾಗಾಣಿಕೆಗೆ ಸಂಪೂರ್ಣ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈ ಸಂಬಂಧ ರಾಜ್ಯಾದ್ಯಂತ ‘ಶೂನ್ಯ ಸಹಿಷ್ಣುತೆ (Zero Tolerance)’ ನೀತಿಯಡಿ ಕಠಿಣ ಕಾನೂನು ಕ್ರಮ ಜಾರಿಗೊಳಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ.ಗೃಹ ಇಲಾಖೆಯು ಈ ಕುರಿತು ಪ್ರಕಟಣೆ ಹೊರಡಿಸಿದ್ದು, ಅಕ್ರಮ ಮರಳು ಗಣಿಗಾರಿಕೆ ಪರಿಸರಕ್ಕೆ ಹಾನಿ ಉಂಟುಮಾಡುವುದರ ಜೊತೆಗೆ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ಆದಾಯಕ್ಕೂ ದೊಡ್ಡ ಹೊಡೆತ ನೀಡುತ್ತಿದೆ ಎಂದು ತಿಳಿಸಿದೆ.

ಹೀಗಾಗಿ ರಾಜ್ಯದಾದ್ಯಂತ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ಎಲ್ಲ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್‌ಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದ್ದು, ಅಕ್ರಮ ಮರಳು ಗಣಿಗಾರಿಕೆ ನಡೆಯುವ ಪ್ರದೇಶಗಳನ್ನು ಗುರುತಿಸಿ ನಿರಂತರ ನಿಗಾ ವಹಿಸುವುದು, ಅಕ್ರಮ ಸಾಗಾಣಿಕೆ ಹಾಗೂ ಸಂಗ್ರಹಣೆಯನ್ನು ತಡೆಯುವುದು ಸಂಬಂಧಿತ ಪೊಲೀಸ್ ಅಧಿಕಾರಿಗಳ ಹೊಣೆಗಾರಿಕೆಯಾಗಿರಲಿದೆ.

ರಾಜ್ಯದ ಗಡಿ ಪ್ರದೇಶಗಳು ಸೇರಿದಂತೆ ಅಂತಾರಾಜ್ಯ ಮಾರ್ಗಗಳಲ್ಲಿ ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ತನಿಖಾ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಹಾಗೂ ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶಿಸಲಾಗಿದೆ.ಪ್ರತಿ ಪೊಲೀಸ್ ಘಟಕವು ತನ್ನ ವ್ಯಾಪ್ತಿಯಲ್ಲಿನ ಅಕ್ರಮ ಮರಳು ಚಟುವಟಿಕೆಗಳ ಬಗ್ಗೆ ಗುಪ್ತಚರ ಮಾಹಿತಿ ಸಂಗ್ರಹಿಸಿ ಅಗತ್ಯವಿದ್ದಲ್ಲಿ ದಿಢೀರ್ ದಾಳಿ ನಡೆಸಬೇಕು. ನಿರಂತರವಾಗಿ ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಅಲ್ಲದೆ, ಪ್ರತಿ ತಿಂಗಳ ಅಪರಾಧ ಪರಿಶೀಲನಾ ಸಭೆಯಲ್ಲಿ ಠಾಣಾವಾರು ಮರಳು ದಂಧೆ ಪ್ರಕರಣಗಳ ಪರಿಶೀಲನೆ ನಡೆಸಿ ಅಗತ್ಯ ನಿರ್ದೇಶನ ನೀಡುವಂತೆ ಆದೇಶಿಸಲಾಗಿದೆ.

ವಿಫಲ ಅಧಿಕಾರಿಗಳಿಗೂ ಎಚ್ಚರಿಕೆ

ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ತಡೆಯುವಲ್ಲಿ ವಿಫಲವಾಗುವ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. “ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅಕ್ರಮ ಮರಳು ದಂಧೆಯಲ್ಲಿ ತೊಡಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳನ್ನೂ ಬಿಡುವುದಿಲ್ಲ” ಎಂದು ಗೃಹ ಇಲಾಖೆಯ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆಯಾಗಿದ್ದು, ಅಕ್ರಮ ಮರಳು ದಂಧೆಗೆ ಸಂಪೂರ್ಣ ಬ್ರೇಕ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ.

- Advertisement -

Related news

error: Content is protected !!