
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ತೀರ್ಪು ನೀಡಿದೆ.2021ರ ಮೇ 8ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಒಡ್ಡಿದ ಘಟನೆಗೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಉಮೇಶ್ ಯು. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ, ಕಡಬದ ರಾಮಕುಂಜ ನಿವಾಸಿ ಶೇಖರ್ ಅಲಿಯಾಸ್ ಸೇಸಪ್ಪ (30) ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುಮಂಗಲಾ ಚಕಲಬ್ಬಿ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೊ ಕಾಯ್ದೆಯ ಕಲಂ 5(l) ಜೊತೆಗೆ 6ರ ಅಡಿಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.
ಅದೇ ರೀತಿ, ಭಾರತೀಯ ದಂಡ ಸಂಹಿತೆಯ ಕಲಂ 506ರ ಅಡಿಯಲ್ಲಿ ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹25,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಒಂದು ವರ್ಷ ಸಾಮಾನ್ಯ ಕಾರಾಗೃಹ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಪುಷ್ಪರಾಜ್ ಆಡ್ಯಂತಾಯ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.








