

ಚಿಕ್ಕಬಳ್ಳಾಪುರ : ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬುಧವಾರ ನಡೆದಿದೆ.


ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರಿನಲ್ಲೇ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದಲ್ಲಿ ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.ಐವರು ಯುವಕರು ಕಾರಿನಲ್ಲಿ ಬೆಂಗಳೂರಿನಿಂದ ಚಿಕ್ಕಬಳ್ಳಾಪುರದತ್ತ ಪ್ರಯಾಣಿಸುತ್ತಿದ್ದರು. ನಂದಿಗಿರಿಧಾಮ ಪೊಲೀಸ್ ಠಾಣೆ ಮುಂಭಾಗದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಏಕಾಏಕಿ ರಸ್ತೆ ವಿಭಜಕವನ್ನು (ಡಿವೈಡರ್) ದಾಟಿ ಎದುರು ದಿಕ್ಕಿನಿಂದ ಬರುತ್ತಿದ್ದ ಬೊಲೆರೊ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತಪಟ್ಟ ನಾಲ್ವರು ಯುವಕರ ಪೈಕಿ ಜಗದೀಶ್ ಹಾಗೂ ವೈಷ್ಣವ್ ಎಂಬುವವರ ಗುರುತು ಪತ್ತೆಯಾಗಿದ್ದು, ಇವರು ಬೆಂಗಳೂರಿನ ಯಲಹಂಕ ಮೂಲದವರು ಎಂದು ತಿಳಿದುಬಂದಿದೆ.
ಉಳಿದ ಇಬ್ಬರು ಮೃತರ ಗುರುತು ಪತ್ತೆ ಕಾರ್ಯವನ್ನು ಪೊಲೀಸರು ಮುಂದುವರಿಸಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ನಂದಿಗಿರಿಧಾಮ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳುವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ








