

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್ ತನಿಖೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ವಿರುದ್ಧ ಹಗೆ ಸಾಧಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಂಗಳೂರಿನ ಜಾಲಹಳ್ಳಿಯ ಎಚ್‌ಎಂಟಿ ಆಟದ ಮೈದಾನದಲ್ಲಿ ರವಿವಾರ ಸಂಜೆ ನಡೆದ ಎಚ್‌ಎಂಟಿ ಕನ್ನಡಿಗ ನೂತನ ಸರಣಿಯ ಕೈಗಡಿಯಾರಗಳ ಲೋಕಾರ್ಪಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.”ಸೋಮವಾರ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇನೆ. ಸ್ಟಿಂಗ್ ಆಪರೇಷನ್ ಯಾರಿಗೆ ತಿರುಗುಬಾಣವಾಗುತ್ತದೆ ಎಂಬುದನ್ನು ತಿಳಿಸುತ್ತೇನೆ. ನಮ್ಮ ಬಗ್ಗೆ ಯಾರೂ ಗಾಬರಿಯಾಗಬೇಕಿಲ್ಲ. ಯಾರೀ ಪೊಲೀಸ್ ಕಮಿಷನರ್? ಅವರು ಪೊಲೀಸ್ ಕಮಿಷನರಾ? ಹೆಡ್ ಕ್ಲರ್ಕ್‌ಗಿಂತ ಕಡೆಯಾಗಿ ಹೇಳಿಕೆ ನೀಡಿದ್ದಾರೆ. ಯಾರ ಹಂಗಿನಲ್ಲಿ ಕೆಲಸ ಮಾಡುತ್ತಿದ್ದಾರೆ?”ಎಂದು ಕುಮಾರಸ್ವಾಮಿ ಕಿಡಿಕಾರಿದರು.ಪೊಲೀಸ್ ಆಯುಕ್ತರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಏನೆಲ್ಲ ಮಾಡುತ್ತಿದ್ದಾರೆ ಎಂಬುದು ತಮಗೆ ತಿಳಿದಿದೆ. ಪೊಲೀಸ್ ಇಲಾಖೆಯೊಳಗೆ ಏನು ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸುವುದಾಗಿ ಹೇಳಿದ ಅವರು, ಈ ಪ್ರಕರಣ ಯಾರಿಗೆ ತಿರುಗುಬಾಣವಾಗಲಿದೆ ಎಂಬುದನ್ನು ಸೋಮವಾರ ಸಂಪೂರ್ಣ ಮಾಹಿತಿ ಸಹಿತ ತಿಳಿಸುವುದಾಗಿ ಹೇಳಿದರು.ಸ್ಟಿಂಗ್ ಆಪರೇಷನ್ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಮತ್ತು ಯಾವ ಹಂತಕ್ಕೆ ತಲುಪಿದೆ ಎಂಬುದು ತಮಗೆ ತಿಳಿದಿದೆ. ರಾಜ್ಯ ಸರ್ಕಾರದ ಆಡಳಿತದ ಕಾರ್ಯವೈಖರಿಯ ಬಗ್ಗೆಯೂ ಮಾತನಾಡುವುದಾಗಿ ತಿಳಿಸಿದ ಅವರು, “ಈ ಕುಮಾರಸ್ವಾಮಿಯನ್ನು ಈ ಸರ್ಕಾರವಾಗಲಿ, ಅಧಿಕಾರಿಗಳಾಗಲಿ ಟಚ್ ಸಾಧ್ಯವಿಲ್ಲ. ನನ್ನನ್ನು ಅಷ್ಟು ಸುಲಭವಾಗಿ ಎದುರಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಕೆ ನೀಡಿದರು.
ಈ ಸರ್ಕಾರ ಯಾರನ್ನೆಲ್ಲ ರಕ್ಷಿಸುತ್ತಿದೆ ಎಂಬುದು ತಮಗೆ ಗೊತ್ತಿದೆ ಎಂದು ಹೇಳಿದ ಕುಮಾರಸ್ವಾಮಿ, “ಸಿದ್ದರಾಮಯ್ಯ ಅವರು ಯಾಕೆ ತಡೆಯಾಜ್ಞೆ ಪಡೆದಿದ್ದಾರೆ? ಯತೀಂದ್ರ ಸಿದ್ದರಾಮಯ್ಯ ಅವರೇ ನಮ್ಮ ಪಕ್ಷದವರು ಸ್ಟಿಂಗ್ ಮಾಡಿದ್ದಾರೆ ಎಂದು ಹೇಳಿದ್ದಾರೆ” ಎಂದರು.ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ‘ಟ್ರೈಲರ್’ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಇದೆಲ್ಲ ಯಾವ ಟ್ರೈಲರ್? ನಾನು ಸಿನಿಮಾ ಮಾಡಿದವನು. ಇವರು ಈಗ ಸಿನಿಮಾ ಮಾಡಲು ಶುರು ಮಾಡಿದ್ದಾರೆ. ಇವರ ಸಿನಿಮಾ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.








