





ಬರೇಲಿ: ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆ ಮತ್ತು ಆಕೆಯ ಕುಟುಂಬದ ಸದಸ್ಯರ ಮೇಲೆ ಆ್ಯಸಿಡ್ ಎರಚಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡದಿದೆ.
ಶನಿವಾರ ಶೇರ್ ಗಢ್ ಪ್ರದೇಶದಲ್ಲಿ ನಡೆದ ಈ ಘಟನೆಯಲ್ಲಿ ಮಹಿಳೆ, ಆಕೆಯ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಈ ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ದೇವಿ ಎಂದು ಗುರುತಿಸಲಾಗಿದ್ದು, ಆಕೆಯ ಕುಟುಂಬದ ಸದಸ್ಯರೂ ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಆರೋಪಿಯಯನ್ನು ಉಮೇಶ್ ಕಶ್ಯಪ್ ಎಂದು ಗುರುತಿಸಲಾಗಿದ್ದು, ಆತ ಈಗಾಗಲೇ ವಿವಾಹವಾಗಿದ್ದ ಮಹಿಳೆಯನ್ನೇ ವಿವಾಹವಾಗಲು ಬಯಸಿದ್ದ ಎನ್ನಲಾಗಿದೆ.
ದೇವಿ ಹಾಗೂ ಆಕೆಯ ಕುಟುಂಬದ ಸದಸ್ಯರು ತಮ್ಮ ಮನೆಯಲ್ಲಿ ನಿದ್ರಿಸುತ್ತಿದ್ದಾಗ, ಚಾವಣಿಯ ಮೂಲಕ ಅವರ ಮನೆಯನ್ನು ಪ್ರವೇಶಿಸಿರುವ ಆರೋಪಿ, ಅವರ ಮೇಲೆ ಆ್ಯಸಿಡ್ ಎರಚಿದ್ದಾನೆ ಎಂದು ಆರೋಪಿಸಲಾಗಿದೆ.
ಗಾಯಾಳುಗಳನ್ನು ಮೊದಲಿಗೆ ಶೇರ್ ಗಢ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ವೃತ್ತಾಧಿಕಾರಿ ಮೀರ್ ಗಂಜ್, “ದಹನಕಾರಿ ವಸ್ತುವನ್ನು ಎಸೆದಿದ್ದರಿಂದ ಒಂದೇ ಕುಟುಂಬದ ನಾಲ್ವರು ಸದಸ್ಯರಿಗೆ ಸುಟ್ಟು ಗಾಯಗಳಾಗಿವೆ ಎಂಬ ಮಾಹಿತಿಯನ್ನು ಬೆಳಗ್ಗೆ ಸುಮಾರು 6 ಗಂಟೆಗೆ ಶೇರ್ ಗಢ್ ಠಾಣೆಯ ಪೊಲೀಸರು ಸ್ವೀಕರಿಸಿದರು” ಎಂದು ತಿಳಿಸಿದ್ದಾರೆ.
ಈ ಸಂಬಂಧ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸ್ ತಂಡಗಳನ್ನು ರಚಿಸಲಾಗಿದೆ.








