



ಐದು ರಾಜ್ಯಗಳ ವಿಧಾನಸಭೆಗೆ ನಡೆದಿರುವ ಚುನಾವಣೆಯ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಮತಎಣಿಕೆ ಇಂದು ಬೆಳಗ್ಗಿನಿಂದಲೇ ಪ್ರಾರಂಭವಾಗಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರತೀಯ ಜನತಾ ಪಕ್ಷ ನಿರಂತರವಾಗಿ ಮುನ್ನಡೆ ಸಾಧಿಸುತ್ತಿದೆ. ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುಂಚೂಣಿಯಲ್ಲಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.
ಫಲಿತಾಂಶದ ಟ್ರೆಂಡ್ ಪ್ರಕಾರ ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 164 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ 112 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖಭಂಗ ಅನುಭವಿಸಿದೆ. ಛತ್ತೀಸ್ ಗಢದಲ್ಲಿ ಭಾರತೀಯ ಜನತಾ ಪಕ್ಷ 54 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತಾರೂಢ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯುವಂತಾಗಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್ ಎಸ್ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 62 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಲು ಸಿದ್ಧವಾಗಿದೆ.