


ಮಾಣಿ: ಪೆರಾಜೆ – ಮಾಣಿ, ಪೆರಾಜೆಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2024-25 ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ದಾಖಲಿಸಿದ ಎಲ್ಲಾ 79 ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮವು ಜೂನ್ 28 ರಂದು ಬಾಲವಿಕಾಸ ಆಡಿಟೋರಿಯಂ ನಲ್ಲಿ ನಡೆಯಿತು.
ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷ ಪ್ರಹ್ಲಾದ್ ಶೆಟ್ಟಿ ಜೆ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಪ್ರೀತ್ ಕೆ.ಸಿ, ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರನ್ನು ಉದ್ದೇಶಿಸಿ ಮಾತನಾಡಿ ” ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತು ಭವಿಷ್ಯದಲ್ಲಿ ಅವರು ಆಯ್ಕೆ ಮಾಡಿಕೊಳ್ಳುವ ಶೈಕ್ಷಣಿಕ ವಿಷಯಗಳು ಅವರ ಔದ್ಯೋಗಿಕ ಬದುಕನ್ನು ಹೇಗೆ ರೂಪಿಸುತ್ತದೆ ” ಎಂಬುದನ್ನು ನಿದರ್ಶನಗಳ ಮೂಲಕ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಸ್ವಸ್ತಿ ಎಸ್ ಭಟ್, ವೈಷ್ಣವಿ ಹಾಗೂ ಮೊಹಮ್ಮದ್ ತಜೀಮ್ ಇಕ್ಬಾಲ್‌ನ್ನು ಅವರ ಪೋಷಕರೊಂದಿಗೆ ಸನ್ಮಾನಿಸಲಾಯಿತು. ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ ಮತ್ತು ಶಾಲೆಯ ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕ- ಶಿಕ್ಷಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಪ್ರಿಯಾ ಡಿ. ಸ್ವಾಗತಿಸಿ, ಸಹಶಿಕ್ಷಕಿ ರಶ್ಮಿ ಕೆ ಫೆರ್ನಾಂಡಿಸ್ ವಂದಿಸಿದರು. ಹತ್ತನೇ ತರಗತಿಯ ವಿದ್ಯಾರ್ಥಿನಿಯರಾದ ಆಯಿಷಾ ದಾನಿಯಾ ಮತ್ತು ಅಂಶಿಕ ಕಾರ್ಯಕ್ರಮ ನಿರೂಪಿಸಿದರು.