


ಹೈದರಾಬಾದ್: ತೆಲಂಗಾಣದ ಸಂಗರೆಡ್ಡಿಯಲ್ಲಿರುವ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವಿನ ಸಂಖ್ಯೆ 35ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈವರೆಗೂ 31 ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ. ಸದ್ಯ ಅಂತಿಮ ಹಂತದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಸತ್ತವರಲ್ಲಿ ಕೆಲವರ ದೇಹ ಸಂಪೂರ್ಣ ಸುಟ್ಟುಹೋಗಿದ್ದು, ಗುರುತು ಪತ್ತೆಹಚ್ಚಲು ಡಿಎನ್‌ಎ ಟೆಸ್ಟ್ ಮಾಡಲಾಗುವುದು ಎಂದು ಐಜಿಪಿ ವಿ.ಸತ್ಯನಾರಾಯಣ್ ಮಾಹಿತಿ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ತೆಲಂಗಾಣದ ಸಂಗರೆಡ್ಡಿಯಲ್ಲಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದಕ್ಕೆ ದುಃಖವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಬರೆದುಕೊಂಡಿದ್ದಾರೆ.