


ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಕಾನೂನು ವಿರೋಧಿ ಕ್ರಮಗಳನ್ನು ಖಂಡಿಸಿ ಪ್ರತಿಭಟನೆಗೆ ಹಿಂದೂ ಜಾಗರಣ ವೇದಿಕೆ ಕರೆ ನೀಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ 2 ತಿಂಗಳುಗಳಿಂದ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆಯು ಕಾನೂನು ವಿರೋಧಿ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಚಾಲಕರಾದ ಶ್ರೀ ಸಮಿತ್ ರಾಜ್ ಧರೆಗುಡ್ಡೆಯವರ ಮೇಲೆ ಸುಳ್ಳು ಮೊಕದ್ದಮೆಯನ್ನು ದಾಖಲಿಸಿ ಬಂಧಿಸಿರುತ್ತಾರೆ.ಇದೇ ರೀತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಅನೇಕ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಅನ್ನು ದಾಖಲಿಸಿ ಅವರಿಗೆ ನೋಟಿಸು ನೀಡದೆ ಬಂಧಿಸುವ ಪ್ರಯತ್ನಗಳು ನಡೆಯುತ್ತಿದೆ.ಕಾನೂನಿಗೆ ವಿರುದ್ಧವಾಗಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಕರ್ನಾಟಕದ ರಾಜ್ಯ ಕಾಂಗ್ರೆಸ್ ಸರಕಾರವು ವಾಕ್ ಸ್ವಾತಂತ್ರ್ಯವನ್ನು,ಧಾರ್ಮಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ಈ ದೇಶದಲ್ಲಿ ಸಂವಿಧಾನಿಕವಾಗಿ ಪ್ರತಿಯೊಬ್ಬ ಪ್ರಜೆಗೂ ತನ್ನದೇ ಆದ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ. ಆದರೆ ಇದೆಲ್ಲದನ್ನು ಧಮನಿಸುವ ಕೆಲಸಕ್ಕೆ ಸರ್ಕಾರವು ಕೈ ಹಾಕಿದೆ.
ಆದುದರಿಂದ ರಾಜ್ಯದ ಹಿಂದೂ ವಿರೋಧಿ ಸರ್ಕಾರದ ನಿಲುವನ್ನು ಖಂಡಿಸಿ,ಜುಲೈ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಮೂಡಬಿದ್ರೆ,ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಉಡುಪಿ, ಕುಂದಾಪುರದಲ್ಲಿ ಏಕಕಾಲದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನ ಸಭೆಗಳನ್ನು ಸಂಘಟಿಸಲು ಸಂಘಟನೆಯು ನಿರ್ಧರಿಸಿದೆ ಎಂದು ಹಿಂದೂ ಜಾಗರಣ ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.