


ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಇವತ್ತು ಬಿಗ್ ಡೇ. ಅತ್ಯಾಚಾರ, ಲೈಂಗಿಕ ದೌರ್ಜನ್ಯ\ಸೇರಿದಂತೆ ಹಲವು ಆರೋಪಗಳನ್ನು ಎದುರಿಸುತ್ತಿರೋ ಪ್ರಜ್ವಲ್ ಭವಿಷ್ಯ ಇಂದು ನಿರ್ಧಾರವಾಗಲಿದೆ. 26 ಸಾಕ್ಷಿಗಳ ವಿಚಾರಣೆಯ ನಂತರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.
ಈ ತೀರ್ಪು ಪ್ರಜ್ವಲ್ ರೇವಣ್ಣ ರಾಜಕೀಯ ಭವಿಷ್ಯದ ಮೇಲೂ ಪ್ರಭಾವ ಬೀರಲಿದೆ. ಪ್ರಜ್ವಲ್ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಇಂದು (ಬುಧವಾರ) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.
2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರೇಪ್ ಕೇಸ್ ದಾಖಲಿಸಿಕೊಂಡಿದ್ದರು. ಕೇವಲ 7 ತಿಂಗಳಿನಲ್ಲಿ ಸಾಕ್ಷ್ಯ ವಿಚಾರಣೆ ಪೂರ್ಣಗೊಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಇಂದಿಗೆ ತೀರ್ಪು ಕಾಯ್ದಿರಿಸಿದ್ದಾರೆ.
ಇನ್ನುಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆಗಸ್ಟ್ 2ಕ್ಕೆ ಮುಂದೂಡಿದೆ. ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಂಸದರು ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ವಜಾಗೊಳಿಸಿದೆ.
ಪ್ರಜ್ವಲ್ ರೇವಣ್ಣ ಅವರು ಹೊಳೆನರಸೀಪುರದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಹೊಳೆನರಸೀಪುರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಪೊಲೀಸರು, 2,144 ಪುಟಗಳ ಹಾಗೂ 150 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.








