
ಬೆಳಗಾವಿ: ಮೊಟ್ಟೆ ಸೇವನೆಯಿಂದ ಕ್ಯಾನ್ಸರ್ ಉಂಟಾಗುತ್ತದೆ ಎಂಬ ವೈರಲ್ ಸುದ್ದಿಗೆ ಸಂಬಂಧಿಸಿ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಮೊಟ್ಟೆಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದುವರೆಗೆ ನಡೆದ ಪರೀಕ್ಷೆಗಳಲ್ಲಿ ಯಾವುದೇ ಲೋಪ ಅಥವಾ ಅಪಾಯಕಾರಕ ಅಂಶಗಳು ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.


ಮಂಗಳವಾರ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ಖಾಸಗಿ ಕಂಪನಿಯೊಂದು ಮೊಟ್ಟೆಗಳ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಉಂಟಾಗಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಹಿಂದೆ 124 ಮೊಟ್ಟೆಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವುಗಳಲ್ಲಿ 123 ಮೊಟ್ಟೆಗಳು ಗುಣಮಟ್ಟದ ದೃಷ್ಟಿಯಿಂದ ಸಂಪೂರ್ಣ ಸುರಕ್ಷಿತವಾಗಿವೆ ಎಂಬ ವರದಿ ಲಭಿಸಿದೆ ಎಂದು ತಿಳಿಸಿದರು.

“ಪ್ರಸ್ತುತ ಎಗೋಸ್ ಕಂಪನಿಯ ಮೊಟ್ಟೆಗಳನ್ನೂ ಸೇರಿದಂತೆ ವಿವಿಧ ಮೂಲಗಳಿಂದ ಮೊಟ್ಟೆಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಮೂರ್ನಾಲ್ಕು ದಿನಗಳಲ್ಲಿ ಅದರ ವರದಿ ಲಭ್ಯವಾಗಲಿದೆ,” ಎಂದು ಸಚಿವರು ಹೇಳಿದರು. ಮೊಟ್ಟೆ ವಿಷಯದಲ್ಲಿ ಆತಂಕ ಬೇಡ ಎಂದರು.









