


ಬೆಂಗಳೂರು: ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಟಿಎಂಗಳಿಗೆ ನಗದು ಠೇವಣಿ ಮಾಡುವ ನೆಪದಲ್ಲಿ ಒಂದು ಕೋಟಿಗೂ ಅಧಿಕ ಹಣವನ್ನು ದೋಚಿ, ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿಯೇ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋರಮಂಗಲದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ಗೆ ಸೇರಿದ ವಿವಿಧ ಎಟಿಎಂಗಳಿಗೆ ನಗದು ಠೇವಣಿ ಮಾಡುವಂತೆ ಕಂಪನಿಯ ಅಧಿಕಾರಿ ಮಿಥುನ್ ಅವರು ಜ.19ರಂದು ಸಿಬ್ಬಂದಿಗೆ ಸೂಚನೆ ನೀಡಿದ್ದರು. ಅದರಂತೆ, ಒಂದು ಕೋಟಿಗೂ ಅಧಿಕ ಹಣವನ್ನು ಎಟಿಎಂಗಳಿಗೆ ಜಮಾ ಮಾಡಲು ಸಿದ್ಧಪಡಿಸಲಾಗಿತ್ತು.
ಎಟಿಎಂಗಳಿಗೆ ಹಣ ಹಾಕಲು ಕಂಪನಿಯ ಎರಡು ಪ್ರತ್ಯೇಕ ತಂಡಗಳಿಗೆ ನಗದು ಹಂಚಿಕೆ ಮಾಡಲಾಗಿದ್ದು, ಪ್ರವೀಣ್, ಧನಶೇಖರ್, ರಾಮಕ್ಕ, ಹರೀಶ್ ಕುಮಾರ್, ಪ್ರವೀಣ್ ಕುಮಾರ್ ಹಾಗೂ ವರುಣ್ ಎಂಬ ಸಿಬ್ಬಂದಿಗಳಿಗೆ ಎಟಿಎಂಗಳಿಗೆ ನಗದು ಠೇವಣಿ ಮಾಡುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಆರೋಪಿಗಳು ಎಟಿಎಂಗಳಿಗೆ ಹಣ ಜಮಾ ಮಾಡುವ ಬದಲು ನಗದಿನೊಂದಿಗೆ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಒಂದು ತಂಡವು ಸುಮಾರು 57 ಲಕ್ಷ ರೂಪಾಯಿ ನಗದು ತೆಗೆದುಕೊಂಡು ಪರಾರಿಯಾಗಿದ್ದರೆ, ಮತ್ತೊಂದು ತಂಡವು ಸುಮಾರು 80 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಎಟಿಎಂಗಳಲ್ಲಿ ಹಣ ಜಮಾ ಆಗದೇ ಇರುವುದು ಗಮನಕ್ಕೆ ಬಂದ ಕೂಡಲೇ ಕಂಪನಿ ಅಧಿಕಾರಿಗಳು ಆಂತರಿಕ ಪರಿಶೀಲನೆ ನಡೆಸಿದ ವೇಳೆ ನಗದು ಕಳವುಗೈದಿರುವುದು ದೃಢಪಟ್ಟಿದ್ದು, ತಕ್ಷಣವೇ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಕರೆ ದಾಖಲೆಗಳು ಹಾಗೂ ತಾಂತ್ರಿಕ ಮಾಹಿತಿಯನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಪೊಲೀಸ್ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ.








