


ಬೆಂಗಳೂರು: ಧಾರವಾಡದ ಹುಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ವಿನಯ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತು ವಾದ-ಪ್ರತಿವಾದ ಆಲಿಸಿ, ಜನವರಿ 9ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.
ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕರಿಸಿರುವ ಹೈಕೋರ್ಟ್, ಜಾಮೀನಿನ ಮೇಲೆ ಬಿಡುಗಡೆ ಮಾಡುವ ಸಂಬಂಧ ಅರ್ಜಿದಾರರು ಆಧರಿಸಿರುವ ಎಲ್ಲ ವಾದಗಳನ್ನು ಮುಕ್ತವಾಗಿರಿಸಲಾಗಿದೆ. ಅರ್ಜಿದಾರರ ಮನವಿ ಕುರಿತಂತೆ ಮೆರಿಟ್ ಮೇಲೆ ಯಾವುದೇ ತೀರ್ಮಾನವನ್ನು ನ್ಯಾಯಾಲಯ ದಾಖಲಿಸಿಲ್ಲ. ಅರ್ಜಿದಾರರು ಜಾಮೀನು ಕೋರಿ ಸುಪ್ರೀಂಕೋರ್ಟ್‌ನಲ್ಲಿಯೇ ಅರ್ಜಿ ಸಲ್ಲಿಸಬೇಕಿದೆ ಎಂಬ ಕಾರಣಕ್ಕೆ ಅರ್ಜಿ ಇತ್ಯರ್ಥಪಡಿಸಲಾಗಿದೆ ಎಂದು ಆದೇಶದಲ್ಲಿ ಹೇಳಿದೆ.
ವಿಸ್ತ್ರತ ತೀರ್ಪು ಇನ್ನಷ್ಟೇ ಲಭ್ಯವಾಗಬೇಕಿದೆ.








