

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಸ್ ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಕಾವೂರು ಪೊಲೀಸರು ಕೇವಲ 24 ಗಂಟೆಗಳಲ್ಲೇ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.


ಮಾರ್ಚ್ 7ರಂದು ಮಧ್ಯಾಹ್ನ ಸುಮಾರು 12 ಗಂಟೆಯ ವೇಳೆಗೆ ಮನೆಯವರು ಇಲ್ಲದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಒಳನುಗ್ಗಿ ಕಳ್ಳತನ ನಡೆಸಿದ್ದರು. ಮನೆ ಒಳಗಿನಿಂದ ಸುಮಾರು ರೂ. 4.80 ಲಕ್ಷ ಮೌಲ್ಯದ 39 ಗ್ರಾಂ ಚಿನ್ನದ ಆಭರಣಗಳು ಹಾಗೂ 182 ಗ್ರಾಂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿತ್ತು. ಈ ಕುರಿತು ನೀಡಿದ ದೂರಿನ ಮೇರೆಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣವೇ ಪತ್ತೆ ಕಾರ್ಯಾಚರಣೆ ಆರಂಭಿಸಿ, ಕಳ್ಳತನ ನಡೆಸಿದ ಆರೋಪಿಯಾದ ಅಶೋಕ್ (41), ತಂದೆ ದೊಂಬಯ್ಯ ಪೂಜಾರಿ, ದೇರಾಜೆ ಮನೆ, ಸಜೀಪನಡು (ದಕ್ಷಿಣ ಕನ್ನಡ) ನಿವಾಸಿಯನ್ನು ಮಾರ್ಚ್ 8ರಂದು ಬಂಧಿಸಿದರು. ಬಂಧಿತ ಆರೋಪಿಯಿಂದ ಕಳವು ಮಾಡಲಾಗಿದ್ದ ಎಲ್ಲಾ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಕಾರ್ಯಾಚರಣೆಯನ್ನು ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಎಂ. ಬೈಂದೂರು ಅವರ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕ ಮಲ್ಲಿಕಾರ್ಜುನ ಬಿರಾದಾರ ಹಾಗೂ ಸಿಬ್ಬಂದಿಗಳಾದ ದಿನೇಶ್, ಮಾಲತೇಶ್, ನಾಗರಾಜ್ ಮತ್ತು ರಿಯಾಜ್ ಅವರು ಯಶಸ್ವಿಯಾಗಿ ನಡೆಸಿದ್ದಾರೆ.








