Tuesday, July 21, 2026
spot_imgspot_img
spot_imgspot_img

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್

- Advertisement -
- Advertisement -

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಗುರುವಾರದವರೆಗೆ (ಮಾರ್ಚ್ 26) ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ 2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಈ ಹಿಂದೆ ಎರಡು ಬಾರಿ ಗಡಿಪಾರು ಮಾಡಿದ್ದಾಗ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಆಗ ಹೈಕೋರ್ಟ್ ಎರಡು ಬಾರಿಯೂ ಪ್ರಕರಣವನ್ನು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿ, ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನು ಪ್ರಕಾರ ಸೂಕ್ತ ಆದೇಶ ಹೊರಡಿಸುವಂತೆ ನಿರ್ದೇಶಿಸಿತ್ತು. ಇದೀಗ ಮೂರನೇ ಬಾರಿ ಹೊರಡಿಸಿದ ಗಡಿಪಾರು ಆದೇಶವನ್ನೂ ಪ್ರಶ್ನಿಸಿ ತಿಮರೋಡಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -

Related news

error: Content is protected !!