Tuesday, July 28, 2026
spot_imgspot_img
spot_imgspot_img

ತೃತೀಯ ಭಾಷೆಗೆ ಪಾಸ್-ಫೇಲ್ ರದ್ದು: SSLC ಅಂಕಗಳಲ್ಲಿ ಇಳಿಕೆ – 625ರಿಂದ 525ಕ್ಕೆ

- Advertisement -
- Advertisement -

ಬೆಂಗಳೂರು, ಮಾ.27: ರಾಜ್ಯದ ಎಸೆಸೆಲ್ಸಿ (SSLC) ವಿದ್ಯಾರ್ಥಿಗಳ ಮೇಲಿನ ಪರೀಕ್ಷಾ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ S. Madhu Bangarappa ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇನ್ಮುಂದೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ‘ತೃತೀಯ ಭಾಷೆ’ಯನ್ನು ಗ್ರೇಡಿಂಗ್ ಪದ್ಧತಿಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದರು. ಇದರೊಂದಿಗೆ ತೃತೀಯ ಭಾಷೆಯಲ್ಲಿ ಪಾಸ್-ಫೇಲ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತದೆ.


ಈವರೆಗೆ ಒಟ್ಟು 625 ಅಂಕಗಳ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ 100 ಅಂಕಗಳನ್ನು ಮೀಸಲಿಟ್ಟಿದ್ದರೆ, ಹೊಸ ಕ್ರಮದಂತೆ ಅಂತಿಮ ಫಲಿತಾಂಶದ ಲೆಕ್ಕದಲ್ಲಿ ತೃತೀಯ ಭಾಷೆಯ ಅಂಕಗಳನ್ನು ಪರಿಗಣಿಸಲಾಗುವುದಿಲ್ಲ. ಇದರಿಂದ ಒಟ್ಟು ಅಂಕಗಳು 525ಕ್ಕೆ ಇಳಿಕೆಯಾಗಲಿವೆ. ತೃತೀಯ ಭಾಷೆಗೆ ಎ, ಬಿ, ಸಿ, ಡಿ ಇತ್ಯಾದಿ ಗ್ರೇಡ್‌ಗಳನ್ನು ನೀಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.


ಹಿಂದಿ, ಸಂಸ್ಕೃತ, ತುಳು, ಮರಾಠಿ, ಅರೇಬಿಕ್ ಸೇರಿದಂತೆ ಎಲ್ಲಾ ತೃತೀಯ ಭಾಷೆಗಳಿಗೂ ಈ ನಿಯಮ ಅನ್ವಯವಾಗಲಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಶೀಘ್ರದಲ್ಲೇ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದರು. ಇದೇ ವೇಳೆ, ವಿದ್ಯಾರ್ಥಿಗಳ ನೈತಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ‘ನೈತಿಕ ಶಿಕ್ಷಣ’ವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗಿದ್ದು, ಸರಕಾರದಿಂದ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.


ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ನಿಯಂತ್ರಿಸುವ ಪ್ರಸ್ತಾಪವೂ ಸದನದಲ್ಲಿ ಚರ್ಚೆಗೆ ಬಂದಿದ್ದು, ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ವಿಷಯದಲ್ಲಿ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕೆಂದು ಸಚಿವರು ಮನವಿ ಮಾಡಿದರು.
ಇನ್ನೂ, ವಿದ್ಯಾರ್ಥಿಗಳ ಮೇಲೆ ಪರೀಕ್ಷಾ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆ ನಡೆಸುವ ವ್ಯವಸ್ಥೆ ಮುಂದುವರಿಸಲಾಗಿದ್ದು, ಉತ್ತಮ ಅಂಕಗಳನ್ನು ಉಳಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಸರಕಾರಿ ಶಾಲೆಗಳ ಸಬಲೀಕರಣ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವುದು ಇಲಾಖೆಯ ಪ್ರಮುಖ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.

- Advertisement -

Related news

error: Content is protected !!