



ಸೇಲಂ: ತಮಿಳುನಾಡಿನ ಕೊಯಮತ್ತೂರಿನಲ್ಲಿ ಅತ್ಯಾಚಾರಕ್ಕೀಡಾಗಿ, ಹತ್ಯೆಯಾದ 10 ವರ್ಷದ ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿಸುವ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ನಮ್ಮೊಂದಿಗೆ ಮಾತನಾಡಿದ್ದಾರೆ ಮತ್ತು ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ಯೋಗಕ್ಷೇಮ ವಿಚಾರಿಸಿದ ಅವರು, ಸ್ವಂತ ಮನೆ ಇದೆಯೇ ಎಂದೂ ಕೇಳಿದರು. ತಾವು ಸದಾ ನಮ್ಮೊಂದಿಗೆ ಇರುತ್ತೇವೆ ಎಂದು ಹೇಳಿ ಧೈರ್ಯ ತುಂಬಿದ್ದಾರೆ’ ಎಂದು ಕಣ್ಣೀರಿಟ್ಟಿದ್ದಾರೆ.

ಏನಿದು ಪ್ರಕರಣ?
ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಕೆರೆ ಬಳಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಬಾಲಕಿ ಸುಲೂರು ಪ್ರದೇಶದ ತನ್ನ ಮನೆಯ ಹತ್ತಿರ ದಿನಸಿ ಖರೀದಿಸಲು ಅಂಗಡಿಗೆ ಹೋಗಿದ್ದಳು. ಈ ವೇಳೆ ಕಿಡಿಗೇಡಿಗಳು ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ತಮಿಳುನಾಡು ಪೊಲೀಸ್ ಮಹಾನಿರ್ದೇಶಕ ಸಂದೀಪ್ ರಾಯ್ ರಾಥೋಡ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ತಮಿಳುನಾಡು ಸಚಿವ ಎಂ.ಎಸ್. ಸಂಪತ್ ಅವರು ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾದರು. ಬಳಿಕ ಸಂಪತ್ ಅವರು ಘಟನೆಯ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿದ್ದೇನೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನು, ಈ ಅಮಾನವೀಯ ಕೃತ್ಯ ಇಡೀ ತಮಿಳುನಾಡನ್ನು ಬೆಚ್ಚಿಬೀಳಿಸಿದೆ. ಘಟನೆಯನ್ನು ಖಂಡಿಸಿ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿದ್ದವು. ತೀವ್ರ ಆಕ್ರೋಶದ ಬೆನ್ನಲ್ಲೇ ಶನಿವಾರ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ವಿಜಯ್, ಅಪರಾಧಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಪರಿಚಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.







