



ಲಕ್ನೋ: ಚಂಡಮಾರುತಕ್ಕೆ ಸಿಕ್ಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.
ಹಮೀರ್‌ಪುರದ ಮೋರಾ ಕಂದರ್ ಮತ್ತು ಕುರಾರಾ ಪ್ರದೇಶಗಳನ್ನ ಸಂಪರ್ಕಿಸಲು ಹೊಸ ಸೇತುವೆ ನಿರ್ಮಾಣ ಮಾಡಲಾಗ್ತಿದ್ದು, ಆದ್ರೆ ಗುರುವಾರ (ಮೇ 28)ರ ತಡರಾತ್ರಿ ಪ್ರದೇಶದಲ್ಲಿ ಬಲವಾದ ಬಿರುಗಾಳಿ ಅಪ್ಪಳಿಸಿದೆ. ಇದರಿಂದ ನಿರ್ಮಾಣ ಹಂತದ ಸೇತುವೆ ಬೃಹತ್ ಸ್ಲ್ಯಾಬ್ ಕುಸಿದು ಬಿದ್ದಿದೆ. ಘಟನೆಯಲ್ಲಿ 6 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಆಡಳಿತ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣೆಗೆ ಬೃಹತ್ ಕಾರ್ಯಾಚರಣೆ ಕೈಗೊಂಡಿವೆ.
ಈ ಸೇತುವೆ ದುರಂತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಕ್ರಿಯಿಸಿದ್ದು, ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಸಾಧ್ಯವಿರುವ ಎಲ್ಲ ಸಹಾಯ ಒದಗಿಸಬೇಕು ಎಂದು ಸಿಎಂ ಯೋಗಿ ಸೂಚಿಸಿದ್ದಾರೆ.








