

ಬೆಂಗಳೂರು: ಬಾಲಕಿಯೊಬ್ಬಳ ಸ್ಕ್ಯಾನಿಂಗ್ ವರದಿ ಸಂಬಂಧ ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಕಾಯ್ದೆಯ ನಿಯಮ ಉಲ್ಲಂಘನೆ ಮಾಡಿದ ಆರೋಪದಡಿ ಬಂಧಿತರಾಗಿದ್ದ ರೇಡಿಯಾಲಜಿ ತಜ್ಞರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಮೈಸೂರಿನ ಡಾ. ವೈ.ಆರ್. ಹರ್ಷಿತ್ (32) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರ ರಜಾಕಾಲದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ಡಾ. ಹರ್ಷಿತ್ ಅವರು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ‘ನವಿ ಡಯಾಗ್ನಾಸ್ಟಿಕ್ ಸೆಂಟರ್’ನಲ್ಲಿ ರೇಡಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.2026ರ ಏಪ್ರಿಲ್ 17ರಂದು ಲೋಕಾಯುಕ್ತ ಅಧಿಕಾರಿಗಳು ಕೆ.ಆರ್.ಪೇಟೆಯ ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ನಡೆಸಿದ ವೇಳೆ, ಬಾಲಕಿಯೊಬ್ಬಳ ಸ್ಕ್ಯಾನಿಂಗ್ ವರದಿಗಳು ಪತ್ತೆಯಾಗಿದ್ದವು. ಈ ಸಂಬಂಧ ಮಾಹಿತಿ ಇಲಾಖೆಗೆ ಹಾಗೂ ಪೊಲೀಸರಿಗೆ ನೀಡದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ವೈದ್ಯರನ್ನು ಬಂಧಿಸಲಾಗಿದ್ದು, ಮಂಡ್ಯದ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ವೈದ್ಯರಿಗೆ ಇದೀಗ ಷರತ್ತುಬದ್ಧ ಜಾಮೀನು ದೊರೆತಿದೆ.ಪೋಕ್ಸೊ ಕಾಯ್ದೆಯ ಕಲಂ 19 ಪ್ರಕಾರ, ಅಪ್ರಾಪ್ತರ ಮೇಲಿನ ದೌರ್ಜನ್ಯ ಅಥವಾ ಅನುಮಾನಾಸ್ಪದ ಪ್ರಕರಣಗಳ ಮಾಹಿತಿ ದೊರಕಿದ ತಕ್ಷಣ ಸ್ಥಳೀಯ ಪೊಲೀಸ್ ಠಾಣೆ ಅಥವಾ ವಿಶೇಷ ಮಕ್ಕಳ ಪೊಲೀಸ್ ಘಟಕಕ್ಕೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ.









