Thursday, July 23, 2026
spot_imgspot_img
spot_imgspot_img

ಬಿಜೆಪಿ ಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ..!

- Advertisement -
- Advertisement -

ನವದೆಹಲಿ: ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ವಿದಾಯ ಹೇಳಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಬಿಜೆಪಿಯೊಂದಿಗಿನ ತಮ್ಮ 6 ವರ್ಷಗಳ ಸುದೀರ್ಘ ಸಂಬಂಧವನ್ನು ಕೊನೆಗೊಳಿಸಿದ್ದಾರೆ.

ಎಐಎಡಿಎಂಕೆ ಪಕ್ಷವನ್ನು ಮರಳಿ ಎನ್‌ಡಿಎ ಒಕ್ಕೂಟಕ್ಕೆ ಸೇರಿಸಿಕೊಂಡ ನಂತರ, ಪಕ್ಷದ ಉನ್ನತ ನಾಯಕತ್ವವು ಅಣ್ಣಾಮಲೈ ಅವರನ್ನು ನಿರ್ಲಕ್ಷಿಸುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಸ್ವಪಕ್ಷದ ಕೆಲ ನಿರ್ಧಾರಗಳ ಕುರಿತು ಅವರು ಅಸಮಾಧಾನ ಹೊಂದಿದ್ದರು ಎನ್ನಲಾಗಿದೆ. ಈ ಹಿಂದೆ ಅವರು ತಮಿಳುನಾಡು ವಿಧಾನಸಭಾ ಚುನಾವಣೆಯ ಉಸ್ತುವಾರಿ ಸ್ಥಾನ ಹಾಗೂ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದರು.

ಅಣ್ಣಾಮಲೈ ಅವರು ಬಿಜೆಪಿಯಿಂದ ಹೊರಬಂದು ತಮಿಳುನಾಡಿನಲ್ಲಿ ಸ್ವತಂತ್ರವಾಗಿ ‘ಮಕ್ಕಳ್ ಶಕ್ತಿ ಇಯಕ್ಕಂ’ (ಜನಶಕ್ತಿ ಆಂದೋಲನ) ಎಂಬ ಹೊಸ ಜನಪರ ಚಳವಳಿಯನ್ನು ಅಥವಾ ಸಂಘಟನೆಯನ್ನು ಆರಂಭಿಸಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಅಣ್ಣಾಮಲೈ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇತ್ತೀಚೆಗೆ ಕೇಂದ್ರ ಸರ್ಕಾರದ ತ್ರಿಭಾಷಾ ನೀತಿಗೆ ಅಣ್ಣಾಮಲೈ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದ್ದರು. 9ನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ಭಾಷೆಗಳನ್ನು ಕಡ್ಡಾಯಗೊಳಿಸುವ ನಿರ್ಧಾರಕ್ಕೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಷಯದ ಬಳಿಕ ಬಿಜೆಪಿ ನಾಯಕತ್ವದೊಂದಿಗೆ ಅವರ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚೆಗಳು ಹೆಚ್ಚಾಗಿವೆ.

2021 ರಿಂದ 2025ರವರೆಗೆ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ಅಣ್ಣಾಮಲೈ, ರಾಜ್ಯದಲ್ಲಿ ಬಿಜೆಪಿಯ ಬೆಳವಣಿಗೆಗೆ ಪ್ರಮುಖ ಕಾರಣರಾಗಿದ್ದರು.

ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಮಾಡಿಕೊಂಡ ವಿಚಾರಕ್ಕೂ ಅಣ್ಣಾಮಲೈ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಚುನಾವಣಾ ಪ್ರಚಾರದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲ ಎಂಬ ಮಾತುಗಳು ಕೇಳಿಬಂದಿವೆ. ಅಣ್ಣಾಮಲೈ ಸತತವಾಗಿ ಎರಡು ಬಿಜೆಪಿ ರಾಜ್ಯ ಕಾರ್ಯಕಾರಿ ಸಭೆಗಳಿಗೆ ಗೈರಾಗಿರುವುದು ಕೂಡ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿತ್ತು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!